ಕೊರಟಗೆರೆ: ತಾಲ್ಲೂಕಿನ ಚೀಲಗಾನಹಳ್ಳಿ ಹಾಗೂ ಕತ್ತಿನಾಗೇನಹಳ್ಳಿ ಸೇತುವೆ ಸಮೀಪ ವ್ಯಕ್ತಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಸೇತುವೆ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ಮೂಡಿವೆ. ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ ಎಂಬ ವದಂತಿಗಳು ಸ್ಥಳೀಯವಾಗಿ ಹರಿದಾಡುತ್ತಿದ್ದು, ಘಟನೆ ಕುರಿತು ಸಾರ್ವಜನಿಕರಲ್ಲಿ ಆತಂಕ ಮೂಡಿದೆ.

ವ್ಯಕ್ತಿಯ ಸಾವು ಕೊಲೆಯೇ ಅಥವಾ ಆಕಸ್ಮಿಕ ಅಪಘಾತದಿಂದ ಸಂಭವಿಸಿದೆಯೇ ಎಂಬುದು ಪೊಲೀಸ್ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ. ಮೃತಪಟ್ಟ ವ್ಯಕ್ತಿಯ ಗುರುತು ಹಾಗೂ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರ ಗುರುತು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಕೊರಟಗೆರೆ ಸಿಪಿಐ ಪುರುಷೋತ್ತಮ್, ಪಿಎಸ್ಐ ತೀರ್ಥೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧುಗಿರಿ ಡಿವೈಎಸ್ಪಿ ಮಂಜುನಾಥ್ ಕೂಡ ಸ್ಥಳಕ್ಕೆ ಆಗಮಿಸಿ ತನಿಖೆಯ ಮಾಹಿತಿ ಪಡೆದುಕೊಂಡಿದ್ದಾರೆ.
ಪೊಲೀಸ್ ತನಿಖೆ ಪೂರ್ಣಗೊಂಡ ಬಳಿಕವಷ್ಟೇ ಘಟನೆಯ ಹಿಂದಿನ ಸತ್ಯಾಸತ್ಯತೆ ಹಾಗೂ ಸಾವಿನ ನೈಜ ಕಾರಣ ತಿಳಿದುಬರಬೇಕಿದೆ.
– ಶ್ರೀನಿವಾಸ್ ಕೊರಟಗೆರೆ.
