ಕೊರಟಗೆರೆ:- ಜಮೀನಿನಲ್ಲಿ ಒಬ್ಬಂಟಿಯಾಗಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತ ಸಂಭವಿಸಿ ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಹಾಗೂ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮೈಲಾರಪ್ಪ (55) ಅವರು ಮೃತಪಟ್ಟಿದ್ದಾರೆ.
ತಾಲೂಕಿನ ಹೊಳವನಹಳ್ಳಿ ಹೋಬಳಿಯ ಶಕುನಿತಿಮ್ಮನಹಳ್ಳಿ ಸಮೀಪದ ಬುಡುಮಾರನಹಳ್ಳಿ ಏಕೆ ಕಾಲೋನಿ ನಿವಾಸಿಯಾಗಿದ್ದ ಮೈಲಾರಪ್ಪ ಅವರು ಎಂದಿನಂತೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.
ಈ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಾರ್ವಜನಿಕರು ತಕ್ಷಣ ನೆರವಿಗೆ ಧಾವಿಸಿ, ಸಾರ್ವಜನಿಕರ ಸಹಕಾರದೊಂದಿಗೆ ಅವರನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಮೈಲಾರಪ್ಪ ಅವರು ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಲ್ಲದೆ, ಸಾರ್ವಜನಿಕ ವಲಯದಲ್ಲಿಯೂ ಉತ್ತಮ ಹೆಸರು ಹಾಗೂ ಜನರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು. ಸರಳ ಸ್ವಭಾವದ ಮೂಲಕ ಸ್ಥಳೀಯರ ವಿಶ್ವಾಸ ಗಳಿಸಿದ್ದ ಅವರ ಅಕಾಲಿಕ ನಿಧನವು ಕುಟುಂಬಸ್ಥರು, ಬಂಧುಗಳು, ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ತೀವ್ರ ಆಘಾತ ಉಂಟುಮಾಡಿದೆ.
ಒಬ್ಬ ಜನಪ್ರತಿನಿಧಿಯಾಗಿ ಸಾರ್ವಜನಿಕ ಬದುಕಿನಲ್ಲಿ ಗುರುತಿಸಿಕೊಂಡಿದ್ದ ಮೈಲಾರಪ್ಪ ಅವರ ನಿಧನದಿಂದ ಬುಡುಮಾರನಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಶೋಕದ ಛಾಯೆ ಆವರಿಸಿದೆ. ಮೃತರ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದ್ದು, ಗಣ್ಯರು ಹಾಗೂ ಸ್ಥಳೀಯರು ಸಂತಾಪ ಸೂಚಿಸಿದ್ದಾರೆ.
– ಶ್ರೀನಿವಾಸ್ ಕೊರಟಗೆರೆ.
