ಕೊರಟಗೆರೆ: ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಕೊರಟಗೆರೆ ತಾಲೂಕಿನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಹೊಳವನಹಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಮೀಸಲಾತಿ ಸಾಮಾನ್ಯ ವರ್ಗಕ್ಕೆ ನಿಗದಿಯಾದ ಬೆನ್ನಲ್ಲೇ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ರಾಜಕೀಯ ಲೆಕ್ಕಾಚಾರಗಳು ಹೊಸ ತಿರುವು ಪಡೆದುಕೊಂಡಿವೆ. ಈ ನಡುವೆ ಡಾ. ಅಂಬಿಕಾ ಹುಲಿ ನಾಯಕ್ ಅವರನ್ನು ಭೇಟಿ ಮಾಡಿದ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು, ಹೊಳವನಹಳ್ಳಿ ಕ್ಷೇತ್ರದಿಂದ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಒತ್ತಾಯಿಸಿರುವುದು ಸ್ಥಳೀಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ಒತ್ತಾಯ ಹಾಗೂ ಅಭಿಮಾನಕ್ಕೆ ಅಚ್ಚರಿ ವ್ಯಕ್ತಪಡಿಸಿದ ಡಾ. ಅಂಬಿಕಾ ಹುಲಿ ನಾಯಕ್ ಅವರು, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಸ್ತಾಪವನ್ನು ನಯವಾಗಿಯೇ ಆದರೆ ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಈಗಾಗಲೇ ಎರಡು ಬಾರಿ ವಿಧಾನಸಭಾ ಚುನಾವಣೆ ಹಾಗೂ ಒಂದು ಬಾರಿ ಲೋಕಸಭಾ ಚುನಾವಣೆಗೆ ತಮ್ಮ ಹೆಸರು ಶಿಫಾರಸ್ಸಾಗಿರುವುದನ್ನು ಪ್ರಸ್ತಾಪಿಸಿದ ಅವರು, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸುವ ಯಾವುದೇ ಉದ್ದೇಶ ತಮಗಿಲ್ಲ ಎಂದು ಖಡಾಖಂಡಿತವಾಗಿ ತಿಳಿಸಿದ್ದಾರೆ.

**ವಿಧಾನಸಭಾ ಚುನಾವಣೆಯೇ ನನ್ನ ಮುಂದಿನ ಗುರಿ!**
ಮುಂದಿನ ದಿನಗಳಲ್ಲಿ ಕ್ಷೇತ್ರಗಳ ಮೀಸಲಾತಿ ಬದಲಾವಣೆಯನ್ನು ಗಮನದಲ್ಲಿಟ್ಟುಕೊಂಡು ಯಾವುದಾದರೂ ಒಂದು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿದ್ದೇನೆ. ನಿಮ್ಮೆಲ್ಲರ ಪ್ರೀತಿ, ಅಭಿಮಾನ ಹಾಗೂ ಬೆಂಬಲಕ್ಕೆ ಚಿರಋಣಿಯಾಗಿದ್ದೇನೆ. ಇದೇ ರೀತಿಯ ಪ್ರೀತಿ ಮತ್ತು ಸಹಕಾರ ಮುಂದುವರಿಯಲಿ ಎಂದು ಮುಖಂಡರಲ್ಲಿ ಮನವಿ ಮಾಡಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ಮನವಿಗೆ ಗೌರವ ನೀಡುವುದಾಗಿ ತಿಳಿಸಿದ ಅವರು, ಹೊಳವನಹಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ ಎಂಬ ತಮ್ಮ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ತಮ್ಮೊಂದಿಗೆ ನಿಂತು ಸ್ಪಂದಿಸುವ ಹಾಗೂ ರಾಜಕೀಯವಾಗಿ ಬೆಂಬಲ ನೀಡುವವರ ಪರವಾಗಿ ತಾವು ಸಹ ನಿಲ್ಲುವುದಾಗಿ ತಿಳಿಸಿದ್ದಾರೆ.
**ಎನ್ಡಿಎ ಪಾಳಯದಲ್ಲಿ ಪರ್ಯಾಯ ಅಭ್ಯರ್ಥಿಯ ಹುಡುಕಾಟ?**
ಹೊಳವನಹಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಅಂಬಿಕಾ ಹುಲಿ ನಾಯಕ್ ಅವರನ್ನು ಎನ್ಡಿಎ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಸ್ಥಳೀಯ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಆಸಕ್ತಿ ತೋರಿರುವುದು ಕ್ಷೇತ್ರದ ರಾಜಕೀಯ ಮಹತ್ವವನ್ನು ಎತ್ತಿ ತೋರಿಸಿದೆ. ಆದರೆ, ಅಂಬಿಕಾ ಅವರು ಸ್ಪರ್ಧೆಯಿಂದ ಹಿಂದೆ ಸರಿದಿರುವುದು ಎನ್ಡಿಎ ಪಾಳಯದ ಮುಂದಿನ ಅಭ್ಯರ್ಥಿ ಆಯ್ಕೆಯ ಲೆಕ್ಕಾಚಾರಕ್ಕೆ ಹೊಸ ಆಯಾಮ ನೀಡಿದೆ.
ಒಟ್ಟಾರೆ ಹೊಳವನಹಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿಯೇ ಹೆಚ್ಚು ಕೇಂದ್ರೀಕೃತವಾದ ಕ್ಷೇತ್ರವಾಗಿದ್ದು ಬಿರುಸಿನ ರಾಜಕೀಯ ಚಟುವಟಿಕೆಯ ವೇದಿಕೆಯಾಗಿ ಹೊರಹೊಮ್ಮುತ್ತಿದೆ , ಈ ಹಾವು ಏಣಿ ಆಟದಲ್ಲಿ ಕಾಂಗ್ರೆಸ್ ಹಾಗೂ ಎನ್ ಡಿ ಎ ಅಭ್ಯರ್ಥಿಗಳ ಗೆಲುವಿನ ಲೆಕ್ಕಾಚಾರ ಜಟಿಲವಾಗಿರುವುದು ಕಂಡುಬರುತ್ತಿದೆ.
– ಶ್ರೀನಿವಾಸ್ ಕೊರಟಗೆರೆ.
