ತುಮಕೂರು: ಪತ್ರಕರ್ತರ ರಕ್ಷಣೆಗೆ ಪ್ರತ್ಯೇಕ ಕಾಯ್ದೆ ಜಾರಿಗೊಳಿಸಬೇಕೆಂಬ ಬಹುದಿನಗಳ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ತುಮಕೂರು ಜಿಲ್ಲಾ ಅಧ್ಯಕ್ಷ ಶಿವದರ್ಶನ್ ಎಸ್.ಎಂ. ಅವರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿ, ತಮ್ಮ ರಕ್ತದಿಂದ ಸಹಿ ಮಾಡಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರಕ್ತದಿಂದ ಸಹಿ ಮಾಡಿದ ಮನವಿ ಸಲ್ಲಿಸುವ ಮೂಲಕ ಪತ್ರಕರ್ತರ ಸುರಕ್ಷತೆಯ ವಿಚಾರದಲ್ಲಿ ಸರ್ಕಾರದ ಗಮನ ಸೆಳೆದ ಅವರು, ಮುಂಬರುವ ಡಿಸೆಂಬರ್ ತಿಂಗಳಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲೇ ಪತ್ರಕರ್ತರ ರಕ್ಷಣಾ ಕಾಯ್ದೆ ಜಾರಿಗೆ ತರಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗವು ಸಮಾಜದಲ್ಲಿನ ಅನ್ಯಾಯ, ಭ್ರಷ್ಟಾಚಾರ, ಅಕ್ರಮಗಳು ಹಾಗೂ ಜನಸಾಮಾನ್ಯರ ಸಮಸ್ಯೆಗಳನ್ನು ಬೆಳಕಿಗೆ ತರುವ ಮಹತ್ತರ ಜವಾಬ್ದಾರಿಯನ್ನು ನಿರ್ವಹಿಸುತ್ತಿದೆ. ಆದರೆ, ವೃತ್ತಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಪತ್ರಕರ್ತರು ಹಲ್ಲೆ, ಬೆದರಿಕೆ, ದೌರ್ಜನ್ಯ ಹಾಗೂ ಸುಳ್ಳು ಪ್ರಕರಣಗಳಂತಹ ಹಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಸಮಾಜದ ಪರವಾಗಿ ಧ್ವನಿ ಎತ್ತುವ ಪತ್ರಕರ್ತರಿಗೇ ಸೂಕ್ತ ರಕ್ಷಣೆ ಇಲ್ಲದಿರುವುದು ವಿಷಾದನೀಯ. ಯಾವುದೇ ಭಯ, ಒತ್ತಡ ಅಥವಾ ಪ್ರಭಾವಗಳಿಗೆ ಒಳಗಾಗದೆ ಪತ್ರಕರ್ತರು ನಿರ್ಭೀತಿಯಿಂದ ಕಾರ್ಯನಿರ್ವಹಿಸಲು ಪ್ರತ್ಯೇಕ ರಕ್ಷಣಾ ಕಾಯ್ದೆ ಜಾರಿಯಾಗುವುದು ಅತ್ಯಗತ್ಯವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಪತ್ರಕರ್ತರ ಮೇಲೆ ಹಲ್ಲೆ ನಡೆಸುವವರು ಹಾಗೂ ಅವರ ವೃತ್ತಿ ಕರ್ತವ್ಯಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಪತ್ರಕರ್ತರ ಜೀವ, ಕುಟುಂಬ ಹಾಗೂ ವೃತ್ತಿಯ ಭದ್ರತೆಗೆ ಸರ್ಕಾರ ಕಾನೂನಾತ್ಮಕ ರಕ್ಷಣೆ ಒದಗಿಸಬೇಕು ಎಂಬುದು ಸಂಘಟನೆಯ ಪ್ರಮುಖ ಬೇಡಿಕೆಯಾಗಿದೆ.
ರಕ್ತದಿಂದ ಸಹಿ ಮಾಡಿ ಮನವಿ ಸಲ್ಲಿಸಿರುವುದು ಪತ್ರಕರ್ತರ ಸುರಕ್ಷತೆ ಹಾಗೂ ವೃತ್ತಿಯ ಗೌರವ ಕಾಪಾಡುವ ನಿಟ್ಟಿನಲ್ಲಿ ಸಂಘಟನೆ ನಡೆಸುತ್ತಿರುವ ಹೋರಾಟದ ತೀವ್ರತೆಯನ್ನು ಪ್ರತಿಬಿಂಬಿಸಿದೆ.
ಸರ್ಕಾರ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಬೆಳಗಾವಿ ಅಧಿವೇಶನದಲ್ಲಿಯೇ ಪತ್ರಕರ್ತರ ರಕ್ಷಣಾ ಕಾಯ್ದೆ ಜಾರಿಗೆ ತರಲು ಕ್ರಮ ಕೈಗೊಳ್ಳಬೇಕು. ಪತ್ರಕರ್ತರ ಹಿತಾಸಕ್ತಿ ಮತ್ತು ಸುರಕ್ಷತೆಯ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ತುಮಕೂರು ಜಿಲ್ಲಾ ಅಧ್ಯಕ್ಷ ಶಿವದರ್ಶನ್ ಎಸ್.ಎಂ. ಆಗ್ರಹಿಸಿದ್ದಾರೆ.
ವರದಿ: ನರಸಿಂಹಯ್ಯ ಹೊಸಕೋಟೆ
