ಚನ್ನರಾಯಪಟ್ಟಣ: ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗ ನಿರ್ಮಿಸಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದ ದಿನಾಂಕ ಮುಂದೂಡಿಕೆಯಲ್ಲಿ ನನ್ನ ಯಾವುದೇ ಪಾತ್ರವಿಲ್ಲ. ಕಾರ್ಯಕ್ರಮದ ದಿನಾಂಕ ನಿಗದಿಪಡಿಸಲು ನಾನೇ ಸಚಿವರನ್ನು ಭೇಟಿ ಮಾಡಿ ಪ್ರಯತ್ನಿಸಿದ್ದೇನೆ ಎಂದು ಮಾಜಿ ಎಂಎಲ್ಸಿ ಎಂ.ಎ. ಗೋಪಾಲಸ್ವಾಮಿ ಸ್ಪಷ್ಟಪಡಿಸಿದರು.
ಪಟ್ಟಣದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನವೆಂಬರ್ 30ರಂದು ನಿಗದಿಯಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ರಾಜ್ಯ ಸಚಿವ ಸಂಪುಟ ಸಭೆಯ ಕಾರಣದಿಂದ ಮುಂದೂಡಲಾಗಿದೆ. ಈ ಕುರಿತು ಸಚಿವರೇ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.
ನಾನು ದಲಿತಪರ ಸಂಘಟನೆಗಳ ಮುಖಂಡರೊಂದಿಗೆ ಬೆಂಗಳೂರಿನಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಹಾಗೂ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಖುದ್ದಾಗಿ ಭೇಟಿ ಮಾಡಿ, ನವೆಂಬರ್ 30ರಂದು ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಸಲು ದಿನಾಂಕ ನಿಗದಿಪಡಿಸುವಲ್ಲಿ ಯಶಸ್ವಿಯಾಗಿದ್ದೆ. ಆದರೆ, ಅಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿರುವುದರಿಂದ ಕಾರ್ಯಕ್ರಮಕ್ಕೆ ಆಗಮಿಸಲು ಸಾಧ್ಯವಾಗುವುದಿಲ್ಲ ಎಂದು ಸಚಿವರು ತಿಳಿಸಿದ್ದು, ಅನಿವಾರ್ಯವಾಗಿ ಕಾರ್ಯಕ್ರಮ ಮುಂದೂಡಲಾಗಿದೆ ಎಂದರು.
ಪ್ರತಿಮೆ ಅನಾವರಣ ಕಾರ್ಯಕ್ರಮದ ದಿನಾಂಕ ಮುಂದೂಡಿಕೆಗೆ ಸಂಬಂಧಿಸಿದಂತೆ ನನ್ನ ವಿರುದ್ಧ ಕೆಲವರು ಅಪಪ್ರಚಾರ ಮಾಡುತ್ತಿದ್ದು, ಸಾರ್ವಜನಿಕರು ಇಂತಹ ಆರೋಪಗಳನ್ನು ನಂಬಬಾರದು. ಅಂಬೇಡ್ಕರ್ ಅವರ ಪ್ರತಿಮೆಯನ್ನು ಶೀಘ್ರವಾಗಿ ಲೋಕಾರ್ಪಣೆಗೊಳಿಸಬೇಕೆಂಬ ಉದ್ದೇಶದಿಂದ ನಾನೇ ದಲಿತ ಮುಖಂಡರೊಂದಿಗೆ ಸಚಿವರನ್ನು ಭೇಟಿ ಮಾಡಿ ದಿನಾಂಕ ನಿಗದಿಪಡಿಸಿದ್ದೆ. ಈ ಸಂದರ್ಭದಲ್ಲಿ ನನ್ನೊಂದಿಗೆ ಬೆಂಗಳೂರಿಗೆ ಬಂದಿದ್ದ ಮುಖಂಡರಿಗೆ ವಾಸ್ತವಾಂಶ ತಿಳಿದಿದೆ. ಆದರೂ, ಕೆಲವರು ನನ್ನನ್ನು ವೈಯಕ್ತಿಕವಾಗಿ ತೇಜೋವಧೆ ಮಾಡುವ ಉದ್ದೇಶದಿಂದ ಪ್ರತಿಮೆ ಅನಾವರಣ ಮುಂದೂಡಿಕೆಗೆ ನನ್ನದೇ ಪಾತ್ರವೆಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾನೇ ಕಾರ್ಯಕ್ರಮದ ದಿನಾಂಕ ನಿಗದಿಪಡಿಸಲು ಪ್ರಯತ್ನಿಸಿ ಯಶಸ್ವಿಯಾಗಿದ್ದೇನೆ. ನಾನೇ ಮತ್ತೆ ಕಾರ್ಯಕ್ರಮ ಮುಂದೂಡಲು ಕಾರಣವಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಅವರು, ಸಚಿವ ಕೆ.ಎಚ್. ಮುನಿಯಪ್ಪ ಅವರು ನವೆಂಬರ್ 30ರಂದು ಸಚಿವ ಸಂಪುಟ ಸಭೆ ಇರುವುದರಿಂದ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಲು ಸಾಧ್ಯವಿಲ್ಲ ಎಂದು ತಿಳಿಸಿ, ಈ ವಿಚಾರವನ್ನು ಹಾಸನ ಜಿಲ್ಲಾಧಿಕಾರಿ ಹಾಗೂ ಶ್ರವಣಬೆಳಗೊಳ ಕ್ಷೇತ್ರದ ಶಾಸಕರಿಗೂ ತಿಳಿಸಿದ್ದಾರೆ ಎಂದರು.
ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡರು ನಾಳೆ ಚನ್ನರಾಯಪಟ್ಟಣದಲ್ಲಿ ನಡೆಯಲಿರುವ ಪ್ರಜಾಸೇವೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಡಾ. ಅಂಬೇಡ್ಕರ್ ಪ್ರತಿಮೆ ಅನಾವರಣದ ಮುಂದಿನ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ತಿಳಿಸಿದರು.
ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ನಾಡಹಬ್ಬದಂತೆ ಅದ್ದೂರಿಯಾಗಿ, ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲು ನಾನು ಕಂಕಣಬದ್ಧನಾಗಿದ್ದೇನೆ. ಕಾರ್ಯಕ್ರಮದ ದಿನ ಪಟ್ಟಣವನ್ನು ನೀಲಿ ಬಾವುಟ, ಬಂಟಿಂಗ್ಸ್, ತೋರಣಗಳಿಂದ ಅಲಂಕರಿಸಿ ನೀಲಿಮಯಗೊಳಿಸುವ ಯೋಜನೆ ರೂಪಿಸಿದ್ದೇನೆ. ತಾಲೂಕಿನ ಪ್ರತಿಯೊಂದು ಗ್ರಾಮದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರನ್ನು ಕರೆತರುವ ಪ್ರಯತ್ನ ಮಾಡಲಾಗುವುದು. 10 ಸಾವಿರಕ್ಕೂ ಅಧಿಕ ಜನರ ಸಮ್ಮುಖದಲ್ಲಿ 12 ಅಡಿ ಎತ್ತರದ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಅನಾವರಣಗೊಳ್ಳುವ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕಾತುರನಾಗಿದ್ದೇನೆ ಎಂದರು.
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದ ಫಲವಾಗಿ ನಾನು ಇಂದು ಈ ಸ್ಥಾನಕ್ಕೆ ಬಂದಿದ್ದೇನೆ. ಅವರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ವೈಯಕ್ತಿಕವಾಗಿ ಎಲ್ಲ ರೀತಿಯ ಸಹಕಾರ ನೀಡಲು ಬದ್ಧನಾಗಿದ್ದೇನೆ ಎಂದು ಎಂ.ಎ. ಗೋಪಾಲಸ್ವಾಮಿ ತಿಳಿಸಿದರು.
ವರದಿ : ಐ ಕೆ ಮಂಜುನಾಥ್
