ಶ್ಲೋಕ – 44
ಕೃಷಿಗೋರಕ್ಷ್ಯವಾಣಿಜ್ಯಂ ವೈಶ್ಯಕರ್ಮ ಸ್ವಭಾವಜಮ್ ।
ಪರಿಚರ್ಯಾತ್ಮಕಂ ಕರ್ಮ ಶೂದ್ರಸ್ಯಾಪಿ ಸ್ವಭಾವಜಮ್ ॥೪೪॥
ಕೃಷಿ ಗೋರಕ್ಷ್ಯವಾಣಿಜ್ಯಂ ವೈಶ್ಯಕರ್ಮ ಸ್ವಭಾವಜಮ್ ।
ಪರಿಚರ್ಯಾತ್ಮಕಂ ಕರ್ಮ ಶೂದ್ರಸ್ಯಾಪಿ ಸ್ವಭಾವಜಮ್ –– ಬೇಸಾಯ, ಆಕಳು ಸಾಕಣೆ ಮತ್ತು ವ್ಯಾಪಾರ ವೈಶ್ಯರ ಸ್ವಭಾವಸಹಜವಾದ ಕರ್ಮ. ಸೇವಾರೂಪವಾದ ಕಾಯಕ ಶೂದ್ರ ಸ್ವಭಾವಕ್ಕೆ ಸಹಜವಾದದ್ದು.
ವೈಶ್ಯರ ಸ್ವಭಾವಸಹಜ ಕಾಯಕ ಕೃಷಿ, ಗೋರಕ್ಷಣೆ(ಹೈನುಗಾರಿಕೆ) ಮತ್ತು ವಾಣಿಜ್ಯ. ಭೀಷ್ಮಾಚಾರ್ಯರು ಧರ್ಮರಾಯನಿಗೆ ರಾಜಧರ್ಮ ಉಪದೇಶ ಮಾಡುತ್ತಾ “ಯಾವ ದೇಶದಲ್ಲಿ ಕೃಷಿಕರು ಮತ್ತು ವಾಣಿಜ್ಯೋದ್ಯಮಿಗಳು ಕರಭಾರ ತಡೆಯಲಾಗದೆ ಬೇರೆ ದೇಶಕ್ಕೆ ಹೊರಟು ಹೋಗುತ್ತಾರೆ- ಆ ದೇಶ ಉದ್ಧಾರವಾಗದು” ಎಂದಿದ್ದಾರೆ. ಕೃಷಿ, ವಾಣಿಜ್ಯ ಮತ್ತು ಹೈನುಗಾರಿಕೆ ದೇಶದ ಬೆನ್ನೆಲುಬು. ಈ ಕಾಯಕ ವೈಶ್ಯರ ಸ್ವಭಾವಸಹಜವಾದ ಕರ್ಮ.
ಶೂದ್ರರಲ್ಲಿ ಇನ್ನೊಬ್ಬರ ಸೇವೆ ಮಾಡುವ ಸೇವಾ ಗುಣ ಮಹತ್ವವಾಗಿರುತ್ತದೆ. ಈ ಗುಣ ಇಲ್ಲದವ ಮನುಷ್ಯನೇ ಅಲ್ಲ. ಯಾರೂ ಏಕವರ್ಣದವನಲ್ಲ. ಎಲ್ಲರಲ್ಲೂ ಎಲ್ಲ ಸ್ವಭಾವವಿರುತ್ತದೆ. ಯಾವ ಸ್ವಭಾವ ನಮ್ಮಲ್ಲಿ ಹೆಚ್ಚಾಗಿದೆಯೋ(Majority) ನಾವು ಆ ವರ್ಣಕ್ಕೆ ಸೇರುತ್ತೇವೆ. ಶೂದ್ರ ಸ್ವಭಾವ ಎಷ್ಟು ಮುಖ್ಯ ಎಂದರೆ ಈ ಸ್ವಭಾವ ಇಲ್ಲದೆ ಬೇರೆ ಸ್ವಭಾವಕ್ಕೆ ಬೆಲೆ ಇಲ್ಲ. ಯಾವಾಗಲೂ ನಾವು ಮಾಡುವ ಕರ್ಮವನ್ನು ಸೇವಾ ಮನೋವೃತ್ತಿಯಿಂದ ಮಾಡಬೇಕು. ಉದಾಹರಣೆಗೆ: ಬ್ರಾಹ್ಮಣನಾದವನು ಸಮಾಜ ಸೇವೆಯ ಭಾವನೆಯಿಂದ ಜ್ಞಾನದಾನ ಮಾಡಬೇಕು. ಇಲ್ಲದಿದ್ದರೆ ಅದು ಜ್ಞಾನದಾನವೆನಿಸುವುದಿಲ್ಲ.
