ಸಕಲೇಶಪುರ, ಏ.5: ತಾಲೂಕಿನ ಯಸಳೂರು ಹೋಬಳಿಯ ಕರಗೂರು ಕೂಡಿಗೆ (ಪಾಲಹಳ್ಳಿ) ಗ್ರಾಮದಲ್ಲಿ ಶ್ರೀ ವಾಯುಪುತ್ರ ಸೇವಾ ಸಮಿತಿ ವತಿಯಿಂದ ನೂತನವಾಗಿ ನಿರ್ಮಿಸಿರುವ ಶ್ರೀ ಆಂಜನೇಯಸ್ವಾಮಿಯವರ ಬೃಹತ್ 16 ಅಡಿ ಕಲ್ಲಿನ ಏಕಶಿಲಾ ವಿಗ್ರಹದ ಪ್ರತಿಷ್ಠಾಪನಾ ಮಹೋತ್ಸವ ಅದ್ದೂರಿಯಾಗಿ ನೆರವೇರಿತು.
ಮಹೋತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನಾಶೀರ್ವಾದ ಪಡೆದ ಬಳಿಕ ಧಾರ್ಮಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗಣ್ಯರು, ಇಂತಹ ಧಾರ್ಮಿಕ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶದಲ್ಲಿ ಭಕ್ತಿ, ಸಾಮರಸ್ಯ ಮತ್ತು ಸಂಸ್ಕೃತಿಯ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಅಭಿಪ್ರಾಯಪಟ್ಟರು.

ಶ್ರೀ ವಾಯುಪುತ್ರ ಸೇವಾ ಸಮಿತಿ ವತಿಯಿಂದ ನಿರ್ಮಿಸಲಾದ ಬೃಹತ್ ಏಕಶಿಲಾ ವಿಗ್ರಹವು ಭಕ್ತರಲ್ಲಿ ವಿಶೇಷ ಆಕರ್ಷಣೆಯಾಗಿ ಮೂಡಿಬಂದಿದ್ದು, ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ಸಕಲೇಶಪುರ ಮಂಡಲ ಬಿಜೆಪಿ ಅಧ್ಯಕ್ಷ ವಳಲಹಳ್ಳಿ ಅಶ್ವತ್, ವಾಯುಪುತ್ರ ಸೇವಾ ಸಮಿತಿಯ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
