ರಾಜ್ಯದಲ್ಲಿ 5 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಆಧಾರ್(Aadhaar) ಸಂಖ್ಯೆಯ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್(Biometric update) ಮಾಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.ಸೆಪ್ಟೆಂಬರ್ 30ರ ವರೆಗೆ ಆಧಾರ್ ಸಂಖ್ಯೆಯ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ ಮಾಡಿಸಲು ಕಾಲಾವಕಾಶ ನೀಡಲಾಗಿದೆ.ರಾಜ್ಯದ ಎಲ್ಲ ಆಧಾರ್ ಸೇವಾ ಕೇಂದ್ರಗಳಲ್ಲಿ ಈ ಸೌಲಭ್ಯವನ್ನು ಸಂಪೂರ್ಣ ಉಚಿತವಾಗಿ ಒದಗಿಸಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಹಾಗೂ ಸಂಬಂಧಿತ ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಕೇಂದ್ರಕ್ಕೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಿದೆ.
ಎಲ್ಲ ಪೋಷಕರು ಜವಾಬ್ದಾರಿಯಿಂದ ಈ ಪ್ರಕ್ರಿಯೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಗ್ರಾಮ ಪಂಚಾಯತಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಮೂಲಕ ಈ ವಿಷಯದ ಕುರಿತು ವ್ಯಾಪಕ ಜಾಗೃತಿ ಮೂಡಿಸುವಂತೆ ಜಿಲ್ಲಾಡಳಿತಗಳಿಗೆ ಆದೇಶದಲ್ಲಿ ಸೂಚನೆ ನೀಡಲಾಗಿದೆ.
ಅಪ್ಡೇಟ್ ಏಕೆ ಮಾಡಿಸಬೇಕು?
ಮಕ್ಕಳ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಮಾಡಿಸುವುದರಿಂದ ಹಲವು ಸರ್ಕಾರಿ ಹಾಗೂ ಶೈಕ್ಷಣಿಕ ಸೌಲಭ್ಯಗಳನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ. ಇದರಲ್ಲಿ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವುದು, ಸರ್ಕಾರದ ಯೋಜನೆಗಳ ಲಾಭ ಪಡೆಯುವುದು ಹಾಗೂ ವಿದ್ಯಾರ್ಥಿ ವೇತನ ಮತ್ತು ತರಬೇತಿ ಸೌಲಭ್ಯಗಳನ್ನು ಪಡೆಯುವುದು ಒಳಗೊಂಡಿದೆ.
