ಹಾಸನ: ಜಿಲ್ಲೆಯ ವಿದ್ಯಾವಂತ ಹಾಗೂ ಉದ್ಯೋಗಾಕಾಂಕ್ಷಿ ಯುವಜನತೆಗೆ ಉದ್ಯೋಗದ ಸುವರ್ಣಾವಕಾಶ ಕಲ್ಪಿಸುವ ಉದ್ದೇಶದಿಂದ ಆಚಾರ್ಯ ಪ್ರಥಮ ದರ್ಜೆ ಕಾಲೇಜು, ಹರ್ಷ ಮಹಲ್ ರಸ್ತೆ, ಹಾಸನ ವತಿಯಿಂದ ‘ಆಚಾರ್ಯ ಬೃಹತ್ ಉದ್ಯೋಗ ಮೇಳ–2026’ ಆಯೋಜಿಸಲಾಗಿದೆ.
ಸೆಪ್ಟೆಂಬರ್ 26ರಂದು ಶನಿವಾರ ಬೆಳಗ್ಗೆ 10 ಗಂಟೆಗೆ ಆಚಾರ್ಯ ಕಾಲೇಜಿನ ಆವರಣದಲ್ಲಿ ಉದ್ಯೋಗ ಮೇಳ ನಡೆಯಲಿದೆ ಎಂದು ಆಚಾರ್ಯ ಕಾಮರ್ಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಆದರ್ಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ಯೋಗ ಮೇಳದಲ್ಲಿ ವಿವಿಧ ಕ್ಷೇತ್ರಗಳಲ್ಲಿ 2,000ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿದ್ದು, ಬಿ.ಎ., ಬಿ.ಕಾಂ., ಬಿಸಿಎ, ಡಿಪ್ಲೊಮಾ, ಐಟಿಐ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬಹುದಾಗಿದೆ.
ತಮ್ಮ ವಿದ್ಯಾರ್ಹತೆಗೆ ತಕ್ಕ ಉದ್ಯೋಗದ ಹುಡುಕಾಟದಲ್ಲಿರುವ ಯುವಜನತೆಗೆ ಒಂದೇ ವೇದಿಕೆಯಲ್ಲಿ ಹಲವು ಉದ್ಯೋಗಾವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಈ ಮೇಳ ಆಯೋಜಿಸಲಾಗಿದೆ.
ಹಾಸನ ಜಿಲ್ಲೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ಎಲ್ಲಾ ವಿದ್ಯಾವಂತ ಯುವಕರು, ಯುವತಿಯರು ಹಾಗೂ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಡಾ. ಆದರ್ಶ ಮನವಿ ಮಾಡಿದ್ದಾರೆ.
