ಕೆ.ಆರ್.ಪೇಟೆ: ತಾಲ್ಲೂಕಿನ ವಿವಿಧ ಭಾಗಗಳಿಗೆ ಭೇಟಿ ನೀಡಿದ ಕ್ಷೇತ್ರದ ಶಾಸಕ ಹೆಚ್.ಟಿ.ಮಂಜು ಅವರು ಹೇಮಾವತಿ ಜಲಾಶಯದಿಂದ ಸಾಹುಕಾರ್ ಚೆನ್ನಯ್ಯ ಮುಖ್ಯ ನಾಲೆಯ ಮೂಲಕ ತಾಲ್ಲೂಕಿನ ಕೆರೆಕಟ್ಟೆಗಳಿಗೆ ನೀರು ಹರಿಸಲಾಗುತ್ತಿರುವ ಬಗ್ಗೆ ಅಧಿಕಾರಿಗಳೊಂದಿಗೆ ಸ್ಥಳಗಳನ್ನು ಪರಿಶೀಲನೆ ನಡೆಸಿ ಕೆರೆಗಳಿಗೆ ನೀರು ಹರಿಯುತ್ತಿರುವುದನ್ನು ಖಾತ್ರಿ ಪಡಿಸಿಕೊಂಡರು.
ಯಾವ ಯಾವ ಕೆರೆಗಳಿಗೆ ನೀರು ತುಂಬಿಸುವ ಕಾರ್ಯದ ಪ್ರಗತಿಯನ್ನು ವೀಕ್ಷಿಸಿದ ಅವರು, ನೀರಾವರಿ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈ ವೇಳೆ ಮಾತನಾಡಿ ಶಾಸಕರು ಕಾಲುವೆಗಳಲ್ಲಿ ಶಿಲ್ಟ್ ಹಾಗೂ ಜಂಗಲ್ ಬೆಳೆದಿರುವುದನ್ನು ಗಮನಿಸಿದ ಶಾಸಕ ಹೆಚ್.ಟಿ.ಮಂಜು ಅವರು, ನೀರು ಸರಾಗವಾಗಿ ಹರಿಯಲು ತೊಂದರೆಯಾಗದಂತೆ ತಕ್ಷಣವೇ ಕಾಲುವೆಗಳನ್ನು ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ರೈತರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನೀರು ಹರಿಯುವ ಮಾರ್ಗದಲ್ಲಿ ಅಡಚಣೆಗಳಿದ್ದರೆ ಕೂಡಲೇ ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಎಲ್ಲಾ ಕೆರೆಕಟ್ಟೆಗಳನ್ನು ಈ ಭಾರಿ ತುಂಬಿಸಲಾಗುವುದು ಹಾಗಾಗಿ ತಾಲ್ಲೂಕಿನ ರೈತರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು. ಕಳೆದ 126 ವರ್ಷಗಳಲ್ಲಿ ಈ ವರ್ಷ ವಾಡಿಕೆಗಿಂತ ಮಳೆ ಪ್ರಮಾಣ ಕಡಿಮೆಯಾಗಿದೆ. ಅಣೆಕಟ್ಟಿನಲ್ಲಿ ನೀರಿನ ಸಂಗ್ರಹದ ಈಗಾಗಲೇ ಮಾಹಿತಿ ಪಡೆದಿದ್ದೇನೆ. ಆದ್ದರಿಂದ ಹೇಮಾವತಿ ನದಿಯಿಂದ ತಾಲ್ಲೂಕಿನ ಎಲ್ಲಾ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಒಂದೆರಡು ದಿನ ತಡವಾದರೂ ತಾಲ್ಲೂಕಿನ ಎಲ್ಲಾ ಕೆರೆಕಟ್ಟೆಗಳನ್ನು ಶೇ.100ರಷ್ಟು ತುಂಬಿಸಲಾಗುವುದು ಎಂದು ಖಚಿತ ಭರವಸೆ ತಿಳಿಸಿದರು.
ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು. ರೈತರ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಲಾಗಿದ್ದು, ನೀರಿನ ಲಭ್ಯತೆ ಹಾಗೂ ಕೆರೆಗಳ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಲಾಗುವುದು ಎಂದು ಶಾಸಕ ಹೆಚ್.ಟಿ. ಮಂಜು ತಿಳಿಸಿದರು.
ಈ ಸಮಯದಲ್ಲಿ ಹೇಮಾವತಿ ನೀರಾವರಿ ಇಲಾಖೆಯ ನಂ.03ರ ಕಾರ್ಯಪಾಲಕ ಇಂಜಿನಿಯರ್ ಮಂಜುನಾಥ್, ಎಇಇ ಪ್ರಸನ್ನ, ವಿಶ್ವನಾಥ್, ಅಶೋಕ್, ಸೇ ರಿದಂತೆ ನೀರಾವರಿ ಇಲಾಖೆಯ ಎಲ್ಲಾ ಇಂಜಿನಿಯರ್ ಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
– ಶ್ರೀನಿವಾಸ್ ಆರ್.
