ಆಲೂರು, ಜೂನ್ 24: ಆಲೂರು ತಾಲ್ಲೂಕಿನ ಪಾಳ್ಯ ಹೋಬಳಿಯ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮೂರು ಬಾರಿ ಪಲ್ಟಿಯಾಗಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತಕ್ಕೀಡಾದ ಕಾರು ಹಾಸನದ ಜನಪ್ರಿಯ ವೈದ್ಯರಾದ ಡಾ. ಬಶೀರ್ ಅವರ ಪುತ್ರ ಡಾ. ಶಾರುಕ್ ಅಬ್ದುಲ್ಲ ಅವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ತಡರಾತ್ರಿ ಪ್ರಯಾಣಿಸುತ್ತಿದ್ದ ವೇಳೆ ಕಾರಿನ ಮೇಲೆ ನಿಯಂತ್ರಣ ಕಳೆದುಕೊಂಡ ಪರಿಣಾಮ ರಸ್ತೆ ಬದಿಗೆ ಉರುಳಿ ಹಲವು ಬಾರಿ ಪಲ್ಟಿಯಾಗಿದೆ ಎನ್ನಲಾಗಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದರೂ, ಡಾ. ಶಾರುಕ್ ಅಬ್ದುಲ್ಲ ಅವರು ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿರುವುದು ಅಚ್ಚರಿಯ ಸಂಗತಿಯಾಗಿದೆ. ಅವರಿಗೆ ಸಣ್ಣಪುಟ್ಟ ಗಾಯಗಳೂ ಆಗಿಲ್ಲ ಎಂದು ಮೂಲಗಳು ತಿಳಿಸಿವೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಅತಿವೇಗ ಹಾಗೂ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಘಟನೆ ಕುರಿತು ಸಂಬಂಧಪಟ್ಟ ಪೊಲೀಸರು ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ರಸ್ತೆ ಅಪಘಾತದ ಭೀಕರ ದೃಶ್ಯ ಕಂಡ ಸ್ಥಳೀಯರು, ಕಾರಿನ ಸ್ಥಿತಿ ನೋಡಿ ಚಾಲಕ ಬದುಕುಳಿದಿರುವುದು ಪವಾಡವೇ ಸರಿ ಎಂದು ಅಭಿಪ್ರಾಯಪಟ್ಟಿದ್ದಾರೆ.
