ರಾಮನಾಥಪುರ, ಜು.30: ಹದಿಹರೆಯದ ಮಕ್ಕಳನ್ನೇ ಕೇಂದ್ರವಾಗಿಸಿಕೊಂಡು ವಚನ ಗಾಯನ ಸ್ಪರ್ಧೆ, ಉಚಿತ ವಚನ ಪುಸ್ತಕಗಳ ವಿತರಣೆ ಹಾಗೂ ಶಿವಾನುಭವ ಗೋಷ್ಠಿಗಳ ಮೂಲಕ ಶರಣ ತತ್ವಗಳನ್ನು ಸಮಾಜದಲ್ಲಿ ಬಿತ್ತುವ ಕಾರ್ಯವನ್ನು ಹಾಸನ ಜಿಲ್ಲಾ ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳ ಭಕ್ತ ಬಳಗ ಕಳೆದ 20 ವರ್ಷಗಳಿಂದ ನಿರಂತರವಾಗಿ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದು ಹಿರಿಯ ಸಾಹಿತಿ ಸೀಬಹಳ್ಳಿ ಸೋಮಶೇಖರ್ ಹೇಳಿದರು.

ರಾಮನಾಥಪುರದ ಶ್ರೀ ವಿದ್ಯಾನಿಕೇತನ ಶಾಲೆಯಲ್ಲಿ ಆಯೋಜಿಸಿದ್ದ ವಚನ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2006ರಲ್ಲಿ ಆರಂಭವಾದ ಭಕ್ತ ಬಳಗ ತನ್ನ ವೈವಿಧ್ಯಮಯ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ವಿಶಿಷ್ಟ ಗುರುತನ್ನು ಮೂಡಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬಳಗದ ಸಂಸ್ಥಾಪಕ ಅಧ್ಯಕ್ಷ ಶರಣ ಎಂ.ಎನ್. ಕುಮಾರಸ್ವಾಮಿ ಅವರು ಶರಣ ಸಂಸ್ಕೃತಿಯ ಪ್ರಸಾರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದು, ಹಾಸನ ಜಿಲ್ಲೆಯ ನೂರಾರು ಶಾಲಾ-ಕಾಲೇಜುಗಳೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿ ವಿದ್ಯಾರ್ಥಿಗಳಲ್ಲಿ ಮೌಲ್ಯ ಶಿಕ್ಷಣ ಬೆಳೆಸುವ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ನಡೆಸುತ್ತಿದ್ದಾರೆ ಎಂದು ಪ್ರಶಂಸಿಸಿದರು.

ಹದಿಹರೆಯದ ವಿದ್ಯಾರ್ಥಿಗಳಲ್ಲಿ ಉತ್ತಮ ಸಂಸ್ಕಾರ ಬೆಳೆಸಲು ವಚನ ಸಾಹಿತ್ಯ ಅತ್ಯುತ್ತಮ ಸಾಧನವಾಗಿದೆ. ಬಸವಣ್ಣ, ಚನ್ನಬಸವಣ್ಣ ಹಾಗೂ ಅಕ್ಕಮಹಾದೇವಿಯವರ ವಚನಗಳಲ್ಲಿರುವ ಜೀವನ ಮೌಲ್ಯಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಹಿರಿಯ ವಿದ್ವಾಂಸ ಗೋರುಚ ಅವರ ಕೃತಿಗಳಾದ ‘ಬಸವಪ್ರಸಾದ’, ‘ಚನ್ನಬಸವ ಪ್ರಸಾದ’ ಹಾಗೂ ‘ಅಕ್ಕನ ಪ್ರಸಾದ’ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾನಿಕೇತನ ಶಾಲೆಯ ಸಂಸ್ಥಾಪಕ ಅಧ್ಯಕ್ಷ ವಿರೂಪಾಕ್ಷ, ಹಾಸನ ಜಿಲ್ಲಾ ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳ ಭಕ್ತ ಬಳಗದ ಅಧ್ಯಕ್ಷ ಎಂ.ಎನ್. ಕುಮಾರಸ್ವಾಮಿ, ಉಪಾಧ್ಯಕ್ಷ ಹಾಸನ ವೆಂಕಟೇಶ್, ಸಂಘಟನಾ ಕಾರ್ಯದರ್ಶಿ ಬಿ.ಆರ್. ಪಂಚಾಕ್ಷರಿ, ಯುವ ಘಟಕದ ಅಧ್ಯಕ್ಷ ಆರ್.ಕೆ. ಶ್ರೀನಿವಾಸ್, ಸದಸ್ಯ ಐ.ಬಿ. ಕುಮಾರ್, ಮುಖ್ಯ ಶಿಕ್ಷಕ ರಾಜಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
