ಕೆ.ಆರ್.ಪೇಟೆ: ಪಟ್ಟಣದ ಹಳೆ ಹೇಮಗಿರಿ ರಸ್ತೆಯಲ್ಲಿ ನವೆಂಬರ್ 15ರ ಮಧ್ಯರಾತ್ರಿ ಮನೆಯೊಂದರ ಬಳಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ರವಿ ಕಿರಣ್ ಅವರ ಮನೆಯ ಆವರಣದ ಬಳಿ ಅನುಮಾನಾಸ್ಪದವಾಗಿ ಓಡಾಡಿರುವ ವ್ಯಕ್ತಿಯ ಚಲನವಲನಗಳು ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಮಧ್ಯರಾತ್ರಿ ಕಳ್ಳತನದ ಉದ್ದೇಶದಿಂದ ಬಂದಿರುವ ಶಂಕಿತ ವ್ಯಕ್ತಿ ಮನೆಯ ಸುತ್ತಮುತ್ತ ಓಡಾಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಘಟನೆಯಿಂದ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿದೆ.

ಪೊಲೀಸರ ಕಾರ್ಯವೈಖರಿ ವಿರುದ್ಧ ವಿಶ್ವನಾಥ್ ಆರೋಪ
ಈ ಕುರಿತು ಶ್ರೀರಂಗ ಟಾಕೀಸ್ ಮಾಲೀಕ ಹಾಗೂ ಪುರಸಭೆ ಮಾಜಿ ಸದಸ್ಯ ಹೆಚ್.ಆರ್. ವಿಶ್ವನಾಥ್ ಅವರು ಪೊಲೀಸರ ಕಾರ್ಯವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶ್ರೀರಂಗ ಟಾಕೀಸ್ನಲ್ಲಿ ಕಳ್ಳತನ ಮಾಡಿದ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರೂ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗಿಲ್ಲ. ವಿವಿಧ ಕಳ್ಳತನ ಪ್ರಕರಣಗಳಲ್ಲಿ ಸಾರ್ವಜನಿಕರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರೂ, ಸೂಕ್ತ ಕ್ರಮ ಕೈಗೊಳ್ಳದೆ ಎಚ್ಚರಿಕೆ ನೀಡಿ ಕಳುಹಿಸಲಾಗುತ್ತಿದೆ ಎಂಬ ಆರೋಪವಿದೆ ಎಂದು ವಿಶ್ವನಾಥ್ ದೂರಿದ್ದಾರೆ.
ಕಳ್ಳತನ ಪ್ರಕರಣಗಳ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳದಿರುವುದರಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂಬ ಆತಂಕವನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರ ಆಗ್ರಹ
ಸಿಸಿಟಿವಿಯಲ್ಲಿ ಸೆರೆಯಾಗಿರುವ ಶಂಕಿತ ವ್ಯಕ್ತಿಯನ್ನು ಕೂಡಲೇ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು. ಪಟ್ಟಣದಲ್ಲಿ ರಾತ್ರಿ ಪೊಲೀಸ್ ಗಸ್ತು ಹೆಚ್ಚಿಸಿ ಸಾರ್ವಜನಿಕರ ಆಸ್ತಿಪಾಸ್ತಿ ಹಾಗೂ ಜೀವಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
-ಶ್ರೀನಿವಾಸ್ ಆರ್.
