
ಚಮೋಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ ಸಂಭವಿಸಿದ ಭಾರೀ ಹಿಮಪಾತದಲ್ಲಿ ಸಿಲುಕಿದ್ದ ಗಡಿ ರಸ್ತೆ ಸಂಸ್ಥೆ(ಬಿಆರ್ಒ) 55 ಕಾರ್ಮಿಕರ ಪೈಕಿ ಈವರೆಗೂ 46 ಮಂದಿಯನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಭಾರತೀಯ ಸೇನಾಪಡೆ ಸೇರಿದಂತೆ ರಕ್ಷಣಾ ಪಡೆಗಳು ಕಾರ್ಯಾಚರಣೆಯನ್ನು ಮುಂದುವರೆಸಿವೆ.
ರಕ್ಷಣಾ ಕಾರ್ಯಾಚರಣೆಯ ಎರಡನೇ ದಿನವಾದ ಇಂದು (ಶನಿವಾರ) ರಕ್ಷಣಾ ಪಡೆಗಳು 14 ಮಂದಿ ಕಾರ್ಮಿಕರನ್ನು ರಕ್ಷಣೆ ಮಾಡಿದೆ. 14 ಮಂದಿಯ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾರೀ ಹಿಮಪಾತದ ಕಾರಣ ಶುಕ್ರವಾರ ಸಂಜೆ ಶೋಧ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಹವಾಮಾನ ಬದಲಾದ ಬಳಿಕ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗಿದೆ.
ಚಮೋಲಿಯ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದ ಕಿಶೋರ್ ಜೋಶಿ ಅವರು ರಕ್ಷಣಾ ಕಾರ್ಯಾಚರಣೆಯನ್ನು ಪುನರಾರಂಭಿಸಿರುವ ಕುರಿತು ಮಾಹಿತಿ ನೀಡಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಪುನರಾರಂಭಿಸಲಾಗಿದ್ದು, ಇಂದು 14 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ರಕ್ಷಿಸಲ್ಪಟ್ಟ ಕಾರ್ಮಿಕರನ್ನು ವೈದ್ಯಕೀಯ ನೆರವು ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಮನ ಸೇನಾ ಶಿಬಿರಕ್ಕೆ ಕರೆದೊಯ್ಯಲಾಗಿದೆ ಎಂದು ಹೇಳಿದ್ದಾರೆ.
ಡಿಫೆನ್ಸ್ ಲೆ. ಕರ್ನಲ್ ಮನೀಶ್ ಶ್ರೀವಾಸ್ತವ ಅವರು ಮಾತನಾಡಿ, ಹಿಮಕುಸಿತದ ನಂತರ ಚಮೋಲಿ ಜಿಲ್ಲೆಯ ಮನ ಗ್ರಾಮದಲ್ಲಿ ಭಾರತೀಯ ಸೇನೆಯ ಐಬಿಎಕ್ಸ್ ಬ್ರಿಗೇಡ್ನ ಏಳು ಅಧಿಕಾರಿಗಳು, 17 ಜೆಸಿಒಗಳು ಮತ್ತು 150 ಸಿಬ್ಬಂದಿಗಳನ್ನು ಒಳಗೊಂಡ ರಕ್ಷಣಾ ಪಡೆಯನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.
ಇಬ್ಬರು ವೈದ್ಯರು ಮತ್ತು ನಾಲ್ಕು ಆಂಬ್ಯುಲೆನ್ಸ್ಗಳನ್ನು ಒಳಗೊಂಡಿರುವ ವಿಶೇಷ ವೈದ್ಯಕೀಯ ಘಟಕ ರಕ್ಷಣೆಗೊಂಡವರಿಗೆ ವೈದ್ಯಕೀಯ ಚಿಕಿತ್ಸೆಗಳನ್ನು ನೀಡುತ್ತಿದ್ದಾರೆಂದು ತಿಳಿಸಿದ್ದಾರೆ.
ಶುಕ್ರವಾರ ರಕ್ಷಣಾ ತಂಡ 33 ಕಾರ್ಮಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದವು. ರಾತ್ರಿಯಾಗುತ್ತಿದ್ದಂತೆ ರಕ್ಷಣಾ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು.
ಬದ್ರಿನಾಥ ದೇವಸ್ಥಾನದಿಂದ ಐದು ಕಿಲೋ ಮೀಟರ್ ದೂರದಲ್ಲಿರುವ ಗಡಿಭಾಗ ಮಾನಾ ಗ್ರಾಮದ ಸಮೀಪದಲ್ಲಿ ಹಿಮಪಾತ ಸಂಭವಿಸಿದೆ. ಬಾರ್ಡರ್ ರೋಡ್ಸ್ ಆರ್ಗನೈಸೇಷನ್ನ ಒಟ್ಟು 57 ಸಿಬ್ಬಂದಿಯು ಕಠಿಣ ಕಾರ್ಯಾಚರಣೆಯಲ್ಲಿದ್ದಾಗ ಹಿಮಪಾತವಾಗಿದೆ. ಈ ಪೈಕಿ 22 ಜನರು ಅವಘಡದಿಂದ ತಪ್ಪಿಸಿಕೊಂಡಿದ್ದಾರೆ. ಅವರೆಲ್ಲರನ್ನೂ ಬದರಿನಾಥಕ್ಕೆ ಕಳುಹಿಸಲಾಗಿದೆ.
ಈ ನಡುವೆ ಹಿಮಪಾತ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಹೇಳಿದ್ದಾರೆ.
ಪ್ರಧಾನಿ ಮೋದಿಯವರು ಘಟನೆಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆ ಹಾಗೂ ಕಾರ್ಮಿಕರ ಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆಂದು ಹೇಳಿದ್ದಾರೆ.
ಉತ್ತರಾಖಂಡ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಬಿಡುಗಡೆ ಮಾಡಿದ ಪಟ್ಟಿಯ ಪ್ರಕಾರ, ಹಿಮಪಾತದಲ್ಲಿ ಸಿಲುಕಿರುವ ಕಾರ್ಮಿಕರು ಬಿಹಾರ, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಇತರ ರಾಜ್ಯಗಳಿಗೆ ಸೇರಿದವರಾಗಿದ್ದಾರೆಂದು ತಿಳಿದುಬಂದಿದೆ.