ಬೇಲೂರು: ಆಹಾರ ಅರಸಿ ಗ್ರಾಮಕ್ಕೆ ಬಂದಿದ್ದ ಸುಮಾರು 35 ವರ್ಷ ಪ್ರಾಯದ ಹೆಣ್ಣಾನೆಯೊಂದು ವಿದ್ಯುತ್ ಸ್ಪರ್ಶದಿಂದ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕೋಗಿಲಮನೆ ಗ್ರಾಮದ ಬಳಿ ನಡೆದಿದೆ.
ಸ್ಥಳೀಯ ನಿವಾಸಿ ಶಶಿ ಎಂಬುವವರ ಜಮೀನಿನಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಆಹಾರ ಅರಸಿ ಬಂದಿದ್ದ ಕಾಡಾನೆಗಳ ಹಿಂಡು ಈ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ, ಬಹುತೇಕ ಆನೆಗಳು ವಿದ್ಯುತ್ ತಂತಿಯಿಂದ ಯಾವುದೇ ಅಪಾಯವಿಲ್ಲದೆ ಮುಂದೆ ಸಾಗಿವೆ.
ಆದರೆ ಹಿಂದುಳಿದಿದ್ದ ಹೆಣ್ಣಾನೆಯ ಸೊಂಡಲು ಆಕಸ್ಮಿಕವಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಗೆ ತಗುಲಿದೆ. ಪರಿಣಾಮ ತೀವ್ರ ವಿದ್ಯುತ್ ಆಘಾತಕ್ಕೊಳಗಾದ ಆನೆ ಸ್ಥಳದಲ್ಲೇ ಮೃತಪಟ್ಟಿದೆ.

ಘಟನೆ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆನೆಯ ಸಾವಿಗೆ ವಿದ್ಯುತ್ ತಂತಿಯೇ ಕಾರಣವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಪರಿಶೀಲನೆ ನಡೆಸಲಾಗುತ್ತಿದೆ.
ಆನೆಯ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿರುವ ಸಂದರ್ಭದಲ್ಲಿ ಕಾಡಾನೆಗಳು ಸಂಚರಿಸುವ ಪ್ರದೇಶಗಳಲ್ಲಿ ವಿದ್ಯುತ್ ತಂತಿಗಳ ಸುರಕ್ಷತೆ ಹಾಗೂ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂಬ ಒತ್ತಾಯವೂ ಕೇಳಿಬಂದಿದೆ.
