ಬೇಲೂರು: ಮದುವೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಪ್ರಿಯಾಂಕಾ (29) ಎಂಬ ಮಹಿಳೆ ಚಿಕ್ಕಮಗಳೂರುದಲ್ಲಿ ನಡೆಯುತ್ತಿದ್ದ ಮದುವೆಗೆ ಆಗಮಿಸಿದ್ದ ವೇಳೆ ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಫೆಬ್ರವರಿ 12ರ ರಾತ್ರಿ ಸುಮಾರು 8 ಗಂಟೆ ವೇಳೆಗೆ ಸ್ಥಳೀಯ ಬಸ್ ನಿಲ್ದಾಣದ ಬಳಿಯಿಂದ ಅವರು ನಿಗೂಢವಾಗಿ ಕಣ್ಮರೆಯಾಗಿರುವುದು ಕುಟುಂಬ ಸದಸ್ಯರಿಗೆ ತಿಳಿದುಬಂದಿದೆ. ಕಾಣೆಯಾಗುವ ಮುನ್ನ ಸಂಜೆ 7.30ರ ಸುಮಾರಿಗೆ ಕುಟುಂಬ ಸದಸ್ಯರಿಗೆ ಕರೆ ಮಾಡಿದ್ದ ಪ್ರಿಯಾಂಕಾ, “ಯಾರೋ ಒಬ್ಬರ ಜೊತೆಯಲ್ಲಿ ಸಿಕ್ಕಿದ್ದೇನೆ” ಎಂದು ಹೇಳಿ ಫೋನ್ ಕಟ್ ಮಾಡಿದ್ದರು. ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ ಆಗಿರುವುದಾಗಿ ಸಂಬಂಧಿಕರು ತಿಳಿಸಿದ್ದಾರೆ.
ಇನ್ನೊಂದೆಡೆ ತಾಲೂಕಿನ ಕಲ್ಕೆರೆ ಸಮೀಪ ಮಹಿಳೆಯ ಒಳ ಉಡುಪು, ಚಪ್ಪಲಿ ಹಾಗೂ ವ್ಯಾನಿಟಿ ಬ್ಯಾಗ್ ಪತ್ತೆಯಾಗಿದ್ದು ಪ್ರಕರಣದ ಬಗ್ಗೆ ಮತ್ತಷ್ಟು ಸಂಶಯ ಮೂಡುವಂತೆ ಮಾಡಿದೆ. ಸ್ಥಳದಲ್ಲಿ ಮೊದಲ ದಿನ ಯಾವುದೇ ಬಟ್ಟೆಗಳು ಕಾಣಿಸದಿದ್ದರೂ, ನಂತರ ಅವು ಪತ್ತೆಯಾಗಿರುವುದರಿಂದ ಅನುಮಾನಗಳು ಹೆಚ್ಚಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಮಹಿಳೆ ಸುಮಾರು ₹30 ಲಕ್ಷ ಮೌಲ್ಯದ ಚಿನ್ನಾಭರಣ ಧರಿಸಿದ್ದಾಗಿ ತಿಳಿದುಬಂದಿದ್ದು, ಆಭರಣಗಳಿಗಾಗಿ ಅಪಹರಣ ಅಥವಾ ದೌರ್ಜನ್ಯ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು, ಶ್ವಾನ ದಳ ಹಾಗೂ ಫೋರೆನ್ಸಿಕ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ. ಮಹಿಳೆಯ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
