ಬೆಂಗಳೂರು, ಅ. 22: ರಾಜಧಾನಿ ಬೆಂಗಳೂರಿನ ಪುಲಿಕೇಶಿನಗರದಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಪ್ರಕರಣದ ತನಿಖಾ ವರದಿಗಳನ್ನು ಕೇಳಿದೆ. ಸ್ಫೋಟಕ್ಕೆ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಲಾಗಿದೆಯೇ ಎಂಬ ಶಂಕೆ ವ್ಯಕ್ತವಾಗಿದ್ದು, ವಿಧಿವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.
ಅಕ್ಟೋಬರ್ 20ರಂದು ಪುಲಿಕೇಶಿನಗರದ ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದರು. ಆರಂಭದಲ್ಲಿ ಬ್ಯಾಟರಿ ಸ್ಫೋಟದ ಶಂಕೆ ವ್ಯಕ್ತವಾಗಿದ್ದರೂ, ಮೂರು ಬ್ಯಾಟರಿಗಳ ಬಳಕೆಯಿಂದ ಸ್ಫೋಟ ಸಂಭವಿಸಿದೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.
ಕಟ್ಟಡದ ಸೆಕ್ಯುರಿಟಿ ಗಾರ್ಡ್ಗೆ ಅನಾಮಧೇಯ ಕರೆ ಬಂದಿದ್ದು, ಪಾರ್ಸೆಲ್ವೊಂದನ್ನು ಕಟ್ಟಡದೊಳಗೆ ಇಡುವಂತೆ ಸೂಚಿಸಲಾಗಿತ್ತು ಎನ್ನಲಾಗಿದೆ. ಸೆಕ್ಯುರಿಟಿ ಗಾರ್ಡ್ ಮತ್ತು ಪೇಂಟರ್ ಪಾರ್ಸೆಲ್ ತೆರೆಯಲು ಮುಂದಾದಾಗ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸ್ಥಳದಲ್ಲಿ ಎಫ್ಎಸ್ಎಲ್ ತಜ್ಞರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಭಯೋತ್ಪಾದನಾ ನಿಗ್ರಹ ದಳದ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟದ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ಸ್ಥಳೀಯ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ತನಿಖೆ ಮುಂದುವರಿಸಿದ್ದಾರೆ.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿರುವ ಎನ್ಐಎ, ಲಭ್ಯವಿರುವ ಸಾಕ್ಷ್ಯಗಳು ಹಾಗೂ ತನಿಖಾ ವರದಿಗಳನ್ನು ಪರಿಶೀಲಿಸುತ್ತಿದೆ. ಸ್ಫೋಟಕ್ಕೆ ನಿಖರ ಕಾರಣವೇನು, ಪಾರ್ಸೆಲ್ನ ಮೂಲ ಯಾವುದು ಮತ್ತು ಐಇಡಿ ಬಳಕೆಯಾಗಿದೆಯೇ ಎಂಬುದು ವಿಧಿವಿಜ್ಞಾನ ವರದಿ ಹಾಗೂ ಮುಂದಿನ ತನಿಖೆಯಿಂದ ಸ್ಪಷ್ಟವಾಗಬೇಕಿದೆ.
