ಬೆಂಗಳೂರು, ಜುಲೈ 30: ವಿದ್ಯಾರ್ಥಿಗಳು ಪಠ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ವ್ಯಕ್ತಿತ್ವವನ್ನು ಸಮಗ್ರವಾಗಿ ಬೆಳೆಸಿಕೊಳ್ಳಬೇಕು ಎಂದು ಗಾಯಕಿ, ನಟಿ ಹಾಗೂ ಕಂಠದಾನ ಕಲಾವಿದೆ ಶ್ರೀಮತಿ ಆರ್.ಕೆ. ಸ್ಪರ್ಶ ಕರೆ ನೀಡಿದರು.
ನಗರದ ಶೇಷಾದ್ರಿಪುರಂ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ 2026-27ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣದಷ್ಟೇ ಕಲೆಗೂ ಮಹತ್ವದ ಸ್ಥಾನವಿದೆ. ಕಲೆ ವ್ಯಕ್ತಿಯ ಸೃಜನಶೀಲತೆ, ಆತ್ಮವಿಶ್ವಾಸ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುತ್ತದೆ. ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸುವುದರ ಜೊತೆಗೆ ಸಂಗೀತ, ನೃತ್ಯ, ನಾಟಕ, ಕ್ರೀಡೆ ಸೇರಿದಂತೆ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಆರ್. ಪ್ರಶಾಂತ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಂಸ್ಕಾರ, ಶಿಸ್ತು ಮತ್ತು ಮೌಲ್ಯಗಳನ್ನು ಬೆಳೆಸುವಲ್ಲಿ ಪೋಷಕರು ಹಾಗೂ ಮನೆಯ ವಾತಾವರಣದ ಪಾತ್ರ ಮಹತ್ವದ್ದಾಗಿದೆ. ಜೀವನದಲ್ಲಿ ಯಶಸ್ಸು ಸಾಧಿಸಲು ಶಿಸ್ತು, ಸಮಯಪಾಲನೆ ಹಾಗೂ ನಿರಂತರ ಪರಿಶ್ರಮ ಅತ್ಯಗತ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಡಾ. ಹೆಚ್. ಕಾವ್ಯಶ್ರೀ, ಸಿಬ್ಬಂದಿ ಕಾರ್ಯದರ್ಶಿಗಳಾದ ಬಿ.ಎಂ. ಮಹಾಂತೇಶ್ ಹಾಗೂ ಶ್ರೀಮತಿ ಸಹನಾ ಎಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಸಾಂಸ್ಕೃತಿಕ ಸಮಿತಿ ಸದಸ್ಯರು, ಉಪನ್ಯಾಸಕರು, ಕಚೇರಿ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಂದ ನಡೆದ ಜಾನಪದ ನೃತ್ಯ, ದೇವರನಾಮ ಗಾಯನ ಹಾಗೂ ವಿವಿಧ ಸಾಂಸ್ಕೃತಿಕ ಪ್ರದರ್ಶನಗಳು ನೆರೆದಿದ್ದವರ ಮೆಚ್ಚುಗೆಗೆ ಪಾತ್ರವಾದವು.
