ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಶಾಸಕರಾದ ಎಸ್ .ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ.
ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಕ್ಷೇತ್ರದಿಂದ ಶಿವರಾಮ್ ಹೆಬ್ಬಾರ್ ಬಿಜೆಪಿ ಶಾಸಕರಾಗಿದ್ದರು. ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಎಸ್.ಟಿ.ಸೋಮಶೇಖರ್ ಬಿಜೆಪಿ ಶಾಸಕರಾಗಿದ್ದರು.
ಈ ಹಿಂದೆ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ಬಳಿಕ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದು ಇಬ್ಬರೂ ಸಚಿವರಾಗಿದ್ದರು. ನಂತರ 2023 ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ನಂತರ ನಡೆದ ರಾಜಕೀಯ ವಿದ್ಯಮಾನಗಳಿಂದ ಇಬ್ಬರೂ ಶಾಸಕರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಬಿಜೆಪಿ ನಾಯಕರ ವಿರುದ್ಧ ಮಾತನಾಡಿದ್ದರು. ಈ ಬೆನ್ನಲ್ಲೇ ಇದೀಗ ಪಕ್ಷದ ಹೈಕಮಾಂಡ್ ಇಬ್ಬರೂ ನಾಯಕರನ್ನು ಪಕ್ಷದಿಂದ ಹೊರಹಾಕಿದೆ.
ಇತ್ತೀಚೆಗಷ್ಟೇ ಬಿಜೆಪಿ ಶಾಸಕರ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನೂ ಕೂಡ ಬಿಜೆಪಿ ಉಚ್ಚಾಟನೆ ಮಾಡಿ ಆದೇಶಿಸಿತ್ತು. ಈ ಬೆನ್ನಲ್ಲೇ ಮತ್ತಿಬ್ಬರು ಶಾಸಕರನ್ನು ಉಚ್ಚಾಟಿಸಿದೆ.
