ಹಾಸನ: ದೇಶದ ವಿವಿಧ ಜಿಲ್ಲಾಧಿಕಾರಿ ಕಚೇರಿಗಳಿಗೆ ನಕಲಿ ಬಾಂಬ್ ಬೆದರಿಕೆ ಇ-ಮೇಲ್ಗಳು ಬರುತ್ತಿರುವ ಬೆನ್ನಲ್ಲೇ, ಹಾಸನ ಜಿಲ್ಲಾಧಿಕಾರಿ ಕಚೇರಿಗೂ ಆರ್ಡಿಎಕ್ಸ್ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ಇ-ಮೇಲ್ ಮೂಲಕ ಬೆದರಿಕೆ ಬಂದಿರುವ ಘಟನೆ ಮಂಗಳವಾರ ಸಂಭವಿಸಿದೆ.
ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಯುತ್ತಿದ್ದ ಸಮಯದಲ್ಲೇ ಈ ಇ-ಮೇಲ್ ಬಂದಿದ್ದು, ಕ್ಷಣಮಾತ್ರದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ತಕ್ಷಣವೇ ಮುನ್ನೆಚ್ಚರಿಕಾ ಕ್ರಮವಾಗಿ ಕಟ್ಟಡದಲ್ಲಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಹೊರಗೆ ಕಳುಹಿಸಿ, ಕಚೇರಿಯನ್ನು ಸಂಪೂರ್ಣ ಖಾಲಿ ಮಾಡಲಾಯಿತು.
ಭದ್ರತಾ ದಳಗಳಿಂದ ಶೋಧ ಕಾರ್ಯ:-
ಮಾಹಿತಿ ತಿಳಿದ ತಕ್ಷಣ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಹಾಗೂ ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಸಂಪೂರ್ಣ ತಪಾಸಣೆ ನಡೆಸಿದವು. ಹಲವಾರು ಗಂಟೆಗಳ ಕಾಲ ನಡೆದ ಪರಿಶೀಲನೆಯ ಬಳಿಕ ಯಾವುದೇ ಬಾಂಬ್ ಅಥವಾ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಸಿಬ್ಬಂದಿಗಳಲ್ಲಿ ಗೊಂದಲ:-
ಈ ಅಚಾನಕ್ ಬೆಳವಣಿಗೆಯಿಂದ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಹಾಗೂ ಸಾರ್ವಜನಿಕರಲ್ಲಿ ಕೆಲಕಾಲ ಗೊಂದಲ ಮತ್ತು ಆತಂಕ ಉಂಟಾಯಿತು. ಆದರೆ, ಅಧಿಕಾರಿಗಳ ತ್ವರಿತ ಕ್ರಮದಿಂದ ಯಾವುದೇ ಅನಾಹುತ ಸಂಭವಿಸಿಲ್ಲ.
ತಾಂತ್ರಿಕ ತನಿಖೆ ಆರಂಭ:-
ಈ ಇ-ಮೇಲ್ ಯಾವ ಮೂಲದಿಂದ ಬಂದಿದೆ ಎಂಬುದನ್ನು ಪತ್ತೆ ಹಚ್ಚಲು ತಾಂತ್ರಿಕ ತನಿಖೆ ಆರಂಭಿಸಲಾಗಿದೆ. ಇತ್ತೀಚೆಗೆ ಕೋಲಾರ, ಬೀದರ್, ಕೊಯಮತ್ತೂರು, ಚಿತ್ತೋರಗಢ ಸೇರಿದಂತೆ ದೇಶದ ಹಲವು ಜಿಲ್ಲಾಧಿಕಾರಿ ಕಚೇರಿಗಳಿಗೆ ಇದೇ ರೀತಿಯ ನಕಲಿ ಬಾಂಬ್ ಬೆದರಿಕೆ ಇ-ಮೇಲ್ಗಳು ಬಂದಿರುವುದು ಗಮನಾರ್ಹವಾಗಿದೆ.
ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ:-
ಜನರಲ್ಲಿ ಭೀತಿ ಮತ್ತು ಗೊಂದಲ ಸೃಷ್ಟಿಸುವ ಉದ್ದೇಶದಿಂದ ಇಂತಹ ಕೃತ್ಯಗಳು ನಡೆಯುತ್ತಿವೆ ಎಂದು ಶಂಕಿಸಲಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಒಟ್ಟಿನಲ್ಲಿ, ಹಾಸನ ಜಿಲ್ಲಾಧಿಕಾರಿ ಕಚೇರಿಗೆ ಬಂದ ಬಾಂಬ್ ಬೆದರಿಕೆ ಇ-ಮೇಲ್ ನಕಲಿ ಎನ್ನುವುದು ತಪಾಸಣೆಯಿಂದ ದೃಢಪಟ್ಟಿದ್ದು, ಪ್ರಕರಣದ ಹಿಂದಿರುವವರನ್ನು ಪತ್ತೆ ಹಚ್ಚಲು ತನಿಖೆ ಮುಂದುವರಿದಿದೆ.