
ಬೆಂಗಳೂರು: ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ 2025 ವೈಮಾನಿಕ ಪ್ರದರ್ಶನ ನಡೆಯುತ್ತಿರುವುದರ ಮಧ್ಯೆಯೇ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ(ಕೆಐಎ) ಬಾಂಬ್ ಬೆದರಿಕೆ ಬಂದಿದ್ದು, ಹೆಚ್ಚಿನ ಭದ್ರತಾ ನೀಡಲಾಗಿದೆ.
ಫೆಬ್ರವರಿ 8 ರಂದು ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ‘mahanteshs6699@proton.me’ ವಿಳಾಸದಿಂದ ಬೆದರಿಕೆ ಇಮೇಲ್ ಕಳುಹಿಸಲಾಗಿದೆ.
ಬೆಂಗಳೂರು, ಚೆನ್ನೈ ಮತ್ತು ಕೇರಳದಲ್ಲಿ ಲ್ಯಾಂಡ್ ಆಗುವ ವಿಮಾನಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಪತ್ರಕ್ಕೆ ಪ್ರತಿಕ್ರಿಯೆ ನೀಡುವಂತೆ ಇಮೇಲ್ ಕಳುಹಿಸಿದವರು ಒತ್ತಾಯಿಸಿದ್ದಾರೆ.
“ಬಸವರಾಜ ಬೊಮ್ಮಾಯಿ ಅವರಿಂದ ನನ್ನ ಈ ಪತ್ರಕ್ಕೆ ಪ್ರತಿಕ್ರಿಯೆ ಬರದಿದ್ದರೆ ಬೆಂಗಳೂರು, ಚೆನ್ನೈ ಅಥವಾ ಕೇರಳ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ವಿಮಾನಗಳ ಮೇಲೆ ಡ್ರೋನ್ ದಾಳಿ ನಡೆಯಲಿದೆ” ಎಂದು ಸಂದೇಶದಲ್ಲಿ ತಿಳಿಸಲಾಗಿದೆ.
ಈ ಸಂಬಂಧ ವಿಮಾನ ನಿಲ್ದಾಣ ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 125, 351 (ಕ್ರಿಮಿನಲ್ ಬೆದರಿಕೆ) ಮತ್ತು 353 (ಸಾರ್ವಜನಿಕ ಕಿಡಿಗೇಡಿತನ) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದು, ತನಿಖೆ ನಡೆಯುತ್ತಿದೆ.
ಇಮೇಲ್ನ ಮೂಲವನ್ನು ಪತ್ತೆಹಚ್ಚಲು ಮತ್ತು ಬೆದರಿಕೆಯ ವಿಶ್ವಾಸಾರ್ಹತೆಯನ್ನು ನಿರ್ಣಯಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಂಬ್ ಬೆದರಿಕೆ ಇಮೇಲ್ ನಂತರ ಮತ್ತು ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2025 ವೈಮಾನಿಕ ಪ್ರದರ್ಶನಕ್ಕೆ ಭದ್ರತೆಯನ್ನು ಹೆಚ್ಚಿಸಲಾಗಿದೆ.