ಹಾಸನ : ಕರ್ನಾಟಕ ರಾಜ್ಯ ಮಡಿವಾಳರ ಕ್ಷೇಮಾಭಿವೃದ್ಧಿ ಸಂಘ (ರಿ) ಹಾಗೂ ಉತ್ತರ ಕರ್ನಾಟಕ ಮಡಿವಾಳರ ಸಂಘ (ರಿ) ವತಿಯಿಂದ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಆಗ್ರಹಿಸಿ ಮಾರ್ಚ್ 16 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘದ ರವಿಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಂಗೈಕ್ಯ ಜಗದ್ಗುರು ಶ್ರೀ ಶ್ರೀ ಮಾಚಿದೇವ ಯೋಗಾನಂದಪುರಿ ಮಹಾಸ್ವಾಮೀಜಿ ಅವರ ಆಶೀರ್ವಾದದೊಂದಿಗೆ ಜಗದ್ಗುರು ಡಾ. ಶ್ರೀ ಶ್ರೀ ಬಸವ ಮಾಚಿದೇವ ಮಹಾಸ್ವಾಮೀಜಿ (ಚಿತ್ರದುರ್ಗದ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠ) ಹಾಗೂ ಶ್ರೀಕ್ಷೇತ್ರ ಕರಿಂಜೆ, ಮೂಡಬಿದ್ರೆಯ ಶ್ರೀ ಶ್ರೀ ಮುಕ್ತಾನಂದ ಸ್ವಾಮೀಜಿ ಅವರ ದಿವ್ಯ ಸಾನಿಧ್ಯ ಮತ್ತು ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದೆ ಎಂದು ಅವರು ತಿಳಿಸಿದರು. ಮಡಿವಾಳ ಸಮಾಜವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದ್ದು, ಹಲವು ದಶಕಗಳಿಂದ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕೆಂಬ ಬೇಡಿಕೆ ಮುಂದುವರಿದಿದ್ದರೂ ಸರ್ಕಾರಗಳು ಇದುವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದರು.
2009 ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಡಾ. ಅನ್ನಪೂರ್ಣ ಅವರ ನೇತೃತ್ವದಲ್ಲಿ ನಡೆದ ಕುಲಶಾಸ್ತ್ರ ಅಧ್ಯಯನದ ವರದಿ 2011ರಲ್ಲಿ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಅದರಲ್ಲಿ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಶಿಫಾರಸು ಮಾಡಲಾಗಿದೆ. ಆದರೆ ಈ ವರದಿ ಇಂದಿಗೂ ಜಾರಿಯಾಗದೆ ಸಮಾಜ ಕಲ್ಯಾಣ ಇಲಾಖೆಯಲ್ಲಿಯೇ ಬಾಕಿ ಉಳಿದಿದೆ ಎಂದು ಅವರು ಹೇಳಿದರು. ರಾಜ್ಯದ 19 ಮಂತ್ರಿಗಳು ಹಾಗೂ 137 ಶಾಸಕರಿಂದ ಸೇರಿ ಒಟ್ಟು 156 ಶಿಫಾರಸು ಪತ್ರಗಳನ್ನು ಪಡೆದು ಸರ್ಕಾರಕ್ಕೆ ಸಲ್ಲಿಸಿದ್ದರೂ ಸಹ ಯಾವುದೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿರುವುದು ವಿಷಾದನೀಯ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಆದ್ದರಿಂದ ರಾಜ್ಯದ ಎಲ್ಲಾ ಮಡಿವಾಳ ಸಮುದಾಯದ ಜನರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸರ್ಕಾರಿ ನೌಕರರು ಹಾಗೂ ಸಮಾಜದ ಎಲ್ಲಾ ಕುಲಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ಸಮಾಜದ ಹಕ್ಕಿಗಾಗಿ ಧ್ವನಿ ಎತ್ತಬೇಕು ಎಂದು ಅವರು ಕರೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ರವಿಕುಮಾರ್, ಕುಮಾರ್, ಚಂದ್ರು, ಮಲ್ಲೇಶ್, ಜಯಣ್ಣ, ರೋಹಿತ್, ಸೊಮ್ಮಣ್ಣ, ರಘು ಸೇರಿದಂತೆ ಇತರರು ಉಪಸ್ಥಿತರಿದ್ದರು.
