ಚಾಮರಾಜನಗರ: ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ಮೈ ಭಾರತ್ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಚಾಮರಾಜನಗರ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಬುಧವಾರ ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಶ್ರೀ ಈಶ್ವರ್ ಅವರು ಉದ್ಘಾಟಿಸಿ ಮಾತನಾಡಿ, ಭಾರತೀಯ ಸಂವಿಧಾನದ ಮಹತ್ವ, ಆಶಯಗಳು ಹಾಗೂ ಸಂವಿಧಾನ ದಿನಾಚರಣೆಯ ಉದ್ದೇಶದ ಕುರಿತು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.
ವಿಕಸಿತ ಭಾರತ ಯುವ ಸಂಸತ್ತು ಕಾರ್ಯಕ್ರಮದ ವಿಜೇತೆ ಕುಮಾರಿ ರಿಫಾ ಇರಾಮ್ ಅವರು ಪವರ್ಪಾಯಿಂಟ್ ಪ್ರಸ್ತುತಿಯ ಮೂಲಕ ವಿಕಸಿತ ಭಾರತದ ಪರಿಕಲ್ಪನೆ, ಗುರಿಗಳು ಹಾಗೂ ಭವಿಷ್ಯದ ಭಾರತ ನಿರ್ಮಾಣದಲ್ಲಿ ಯುವಜನರ ಪಾತ್ರದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ.ಆರ್. ಗಂಗಾಧರ್ ಅವರು ಮಾತನಾಡಿ, ಭಾರತೀಯ ಸಂವಿಧಾನದ ಮಹತ್ವ, ಅದರ ಮೌಲ್ಯಗಳು ಹಾಗೂ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಗಳ ಕುರಿತು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಪುಟ್ಟಸ್ವಾಮಿ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದರು. ಮೈ ಭಾರತ್ ಕೇಂದ್ರದ ಸಹನಾ, ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ. ಮಹೇಶ್ ಆರ್., ನೋಡಲ್ ಅಧಿಕಾರಿ ಡಾ. ಮೊಹಮ್ಮದ್ ಮುಸ್ತಫಾ, ವಿಶ್ವವಿದ್ಯಾನಿಲಯದ ಉಪನ್ಯಾಸಕರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವದ ಆಶಯಗಳು ಹಾಗೂ ವಿಕಸಿತ ಭಾರತದ ನಿರ್ಮಾಣದಲ್ಲಿ ಯುವಜನರ ಪಾತ್ರದ ಕುರಿತು ಜಾಗೃತಿ ಮೂಡಿಸಿತು.
– ಶ್ರೀ ಸಾಯಿ ಎಸ್ ಮಂಜು
