ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಚಾಂಪಿಯನ್ಸ್ ಟ್ರೋಫಿ 2025ರ ಅಂತಿಮ ಗುಂಪು ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಿತು.
ಈ ರೋಚಕ ಪಂದ್ಯದಲ್ಲಿ ಭಾರತ ತಂಡ ಎದುರು ನ್ಯೂಜಿಲೆಂಡ್ 44 ರನ್ಗಳಿಂದ ಸೋತಿದೆ. ಚಾಂಪಿಯನ್ಸ್ ಟ್ರೋಫಿಯ ಗುಂಪು ಹಂತದಲ್ಲಿ ಆಡಿದ ಮೂರು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಭಾರತ ಆಗ್ರಸ್ಥಾನ ಪಡೆದಿದೆ.
ಮಾರ್ಚ್ 4 ರಂದು ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬಿ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ತಂಡವನ್ನು ಭಾರತ ಎದುರಿಸಲಿದೆ. ಮತ್ತೊಂದೆಡೆ ಎ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ತಂಡ ದಕ್ಷಿಣ ಆಫ್ರಿಕಾ ಎದುರು ಆಡಲಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 249 ರನ್ ಗಳಿಸಿತು. 250 ರನ್ಗಳ ಗುರಿಯನ್ನು ಬೆನ್ನಟ್ಟಿದ ನ್ಯೂಜಿಲೆಂಡ್ 45.3 ಓವರ್ಗಳಲ್ಲಿ 205 ರನ್ಗಳಿಗೆ ಆಲೌಟ್ ಆಯಿತು.
ಇದರೊಂದಿಗೆ ಭಾರತ 44 ರನ್ಗಳಿಂದ ಗೆದ್ದಿತು.
