ಚನ್ನರಾಯಪಟ್ಟಣ: ಹಾಸನ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ತಾನು ಪ್ರಬಲ ಆಕಾಂಕ್ಷಿಯಾಗಿದ್ದು, ಈ ಬಾರಿ ಪಕ್ಷವು ಮುಸ್ಲಿಂ ಅಥವಾ ದಲಿತ ಸಮಾಜಕ್ಕೆ ಅವಕಾಶ ನೀಡುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಮುಖಂಡ ಸಿ.ಆರ್. ಅಬ್ದುಲ್ ಹಾದಿ ಹೇಳಿದರು.
ಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಮಾಜಿ ಸಚಿವ ಶ್ರೀಕಂಠಯ್ಯ ಅವರ ಶಿಷ್ಯನಾಗಿ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯನಿರ್ವಹಿಸಿದ್ದು, ಮಾಜಿ ಸಚಿವ ಬಿ. ಶಿವರಾಂ ಹಾಗೂ ಮಾಜಿ ಎಂಎಲ್ಸಿ ಎಸ್.ಎಂ. ಆನಂದ್ ಅವರ ಅಧಿಕಾರಾವಧಿಯಲ್ಲಿ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಮಂಡಳಿ ಸದಸ್ಯನಾಗಿ ಜವಾಬ್ದಾರಿ ನಿರ್ವಹಿಸಿದ್ದೇನೆ ಎಂದು ತಿಳಿಸಿದರು.
ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವು ಈ ಹಿಂದೆ ವಿವಿಧ ಸಮಾಜಗಳಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯದ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದೆ. ಅದೇ ರೀತಿಯಲ್ಲಿ ಈ ಬಾರಿ ದಲಿತ ಅಥವಾ ಮುಸ್ಲಿಂ ಸಮಾಜಕ್ಕೆ ಜಿಲ್ಲಾಧ್ಯಕ್ಷ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಹಾಗೂ ರಾಜ್ಯ ಮುಖಂಡರಲ್ಲಿ ಮನವಿ ಮಾಡಿದ್ದೇನೆ ಎಂದರು.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನೂ ಭೇಟಿ ಮಾಡಿ ದಲಿತ ಸಮಾಜಕ್ಕೆ ಪ್ರಾತಿನಿಧ್ಯ ನೀಡುವಂತೆ ಮನವಿ ಮಾಡಿದ್ದೇನೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದ ವೀಕ್ಷಕರು ಈ ಬಾರಿ ಮುಸ್ಲಿಂ ಅಥವಾ ದಲಿತ ಸಮಾಜವನ್ನು ಪರಿಗಣಿಸುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಹಾಸನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನನಗೆ ದೊರೆಯುವ ವಿಶ್ವಾಸವಿದೆ ಎಂದು ಅಬ್ದುಲ್ ಹಾದಿ ಹೇಳಿದರು.
ಸ್ವಾತಂತ್ರ್ಯ ಪೂರ್ವದಿಂದಲೂ ದಲಿತ ಹಾಗೂ ಮುಸ್ಲಿಂ ಸಮಾಜಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲವಾಗಿ ನಿಂತಿವೆ. ಈ ಸಮಾಜಗಳ ಕೊಡುಗೆಯನ್ನು ಪರಿಗಣಿಸಿ ಜಿಲ್ಲಾಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಹೆಚ್ಚಿದೆ ಎಂಬ ಆತ್ಮವಿಶ್ವಾಸವಿದೆ ಎಂದು ಅವರು ತಿಳಿಸಿದರು.
– ಮಂಜುನಾಥ್ ಐ.ಕೆ.
