ಚನ್ನರಾಯಪಟ್ಟಣ: ತಾಲ್ಲೂಕಿನ ದಂಡಿಗನಹಳ್ಳಿ ಹೋಬಳಿಯ ಆನೆಕೆರೆ ಗ್ರಾಮದಲ್ಲಿ ಸುಮಾರು ₹90 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಸಮುದಾಯ ಭವನವನ್ನು ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ. ರೇವಣ್ಣ ಮತ್ತು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಚ್.ಡಿ. ರೇವಣ್ಣ, ಈ ಭಾಗದ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸಮುದಾಯ ಭವನ ನಿರ್ಮಿಸಲಾಗಿದೆ. ಆನೆಕೆರೆ ಗ್ರಾಮದ ಆನೆಕೆರೆ ಅಮ್ಮ ಮತ್ತು ಚಿಕ್ಕಮ್ಮ ದೇವಾಲಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ಹಿನ್ನೆಲೆಯಲ್ಲಿ ಸುಸಜ್ಜಿತ ಸಮುದಾಯ ಭವನ ನಿರ್ಮಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಆನೆಕೆರೆ ಗ್ರಾಮವು ತಮ್ಮ ಕುಟುಂಬಕ್ಕೆ ರಾಜಕೀಯವಾಗಿ ಶಕ್ತಿ ತುಂಬಿದ ಗ್ರಾಮವಾಗಿದೆ. ಗ್ರಾಮದ ಅಭಿವೃದ್ಧಿಗಾಗಿ ತಮ್ಮ ಪೂಜ್ಯ ತಂದೆ ಎಚ್.ಡಿ. ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಕುಟುಂಬದ ಎಲ್ಲ ಸದಸ್ಯರು ನಿರಂತರವಾಗಿ ಶ್ರಮಿಸುತ್ತಾ ಬಂದಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ಗ್ರಾಮದ ದೇವತೆಗಳಾದ ದೊಡ್ಡಮ್ಮ ಮತ್ತು ಚಿಕ್ಕಮ್ಮ ದೇವಾಲಯಗಳಿಗೆ ಬಣ್ಣ ಬಳಿಯಿಸುವಂತೆ ಎಂಎಲ್ಸಿ ಸೂರಜ್ ರೇವಣ್ಣ ಅವರಿಗೆ ಸೂಚನೆ ನೀಡಿದರು. ದೇವಾಲಯಗಳಿಗೆ ಶೀಘ್ರದಲ್ಲೇ ಬಣ್ಣ ಬಳಿಯಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ, ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ, ಜೆಡಿಎಸ್ ಮುಖಂಡರಾದ ನೆಟ್ಟಕೆರೆ ನಾಗರಾಜು, ಬಾಲಣ್ಣ, ವಿಕಾಸ್, ಕರಡೆವು ಕಿರಣ್, ಗುತ್ತಿಗೆದಾರ ನಾಡನಹಳ್ಳಿ ಅಶ್ವಥ್, ಡೈರಿ ಹರೀಶ್, ಬಾಬು ಸೇರಿದಂತೆ ಹಲವರು ಉಪಸ್ಥಿತರಿದ್ದರು.
– ಮಂಜುನಾಥ್ ಐ.ಕೆ.
