ಚನ್ನರಾಯಪಟ್ಟಣ: ತಾಲೂಕು ದಂಡಿಗನಹಳ್ಳಿ ಹೋಬಳಿ ವ್ಯಾಪ್ತಿಯ ಆನೆಕೆರೆ ಸರ್ಕಾರಿ ಪ್ರೌಢಶಾಲೆಯ 2026–27ನೇ ಸಾಲಿನ ಶಾಲಾ ಸಂಸತ್ ರಚನೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮೌಲ್ಯಗಳು, ನಾಯಕತ್ವದ ಗುಣಗಳು ಹಾಗೂ ಜವಾಬ್ದಾರಿಯುತ ನಾಗರಿಕರಾಗುವ ಮಹತ್ವದ ಕುರಿತು ತಿಳಿಸಿದರು. ನಂತರ ಶಾಲಾ ಸಂಸತ್ತಿನ ವಿವಿಧ ಹುದ್ದೆಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಪ್ರಮಾಣವಚನ ಬೋಧಿಸಲಾಯಿತು.

ಶಾಲಾ ಸಂಸತ್ತಿನ ಮುಖ್ಯಮಂತ್ರಿ, ಉಪ ಮುಖ್ಯ ಮಂತ್ರಿ ಹಾಗೂ ವಿವಿಧ ಸಚಿವರನ್ನು ಆಯ್ಕೆ ಮಾಡಲಾಯಿತು. ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಪ್ರತಿನಿಧಿಗಳು ಶಾಲೆಯ ಶಿಸ್ತು, ಸ್ವಚ್ಛತೆ, ಪರಿಸರ ಸಂರಕ್ಷಣೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಪ್ರತಿಜ್ಞೆ ಕೈಗೊಂಡರು.

ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ನೂತನ ಶಾಲಾ ಸಂಸತ್ ಸದಸ್ಯರಿಗೆ ಶುಭ ಹಾರೈಸಿದರು.
– ಮಂಜುನಾಥ್ ಐ.ಕೆ.
