ಚನ್ನರಾಯಪಟ್ಟಣ: ವಿದ್ಯುತ್ ಇಲಾಖೆಯ ಸಿಬ್ಬಂದಿ ಹಾಗೂ ಅವರ ಕುಟುಂಬದವರ ಆರೋಗ್ಯದ ಹಿತದೃಷ್ಟಿಯಿಂದ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಚನ್ನರಾಯಪಟ್ಟಣ ತಾಲ್ಲೂಕು ಘಟಕ, ಪುನರ್ಜೀವ ಸ್ವಯಂಸೇವಾ ಸಂಸ್ಥೆ, ಮೈಸೂರಿನ ಭರತ್ ಆಸ್ಪತ್ರೆ, ಹಾಸನದ ಅಗರ್ವಾಲ್ ಕಣ್ಣಿನ ಆಸ್ಪತ್ರೆ, ಎನ್.ಡಿ.ಆರ್.ಕೆ ಆಸ್ಪತ್ರೆ ಹಾಗೂ ಚನ್ನರಾಯಪಟ್ಟಣದ ಸ್ವಯಂ ಪ್ರೇರಿತ ರಕ್ತ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಈ ಶಿಬಿರ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಸೀಕೆರೆ ಕೆಇಬಿ ಕಚೇರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು. ಎನ್. ವಹಿಸಿದ್ದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಚನ್ನರಾಯಪಟ್ಟಣ ತಾಲ್ಲೂಕು ಘಟಕದ ಅಧ್ಯಕ್ಷ ಭರತ್ ಕುಮಾರ್ ಹೆಚ್.ಜಿ. ಕಾರ್ಯಕ್ರಮ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ವಿದ್ಯುತ್ ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಬಿಸಿಲು, ಮಳೆ, ಗಾಳಿ ಎನ್ನದೆ ನಿರಂತರವಾಗಿ ಕಾರ್ಯನಿರ್ವಹಿಸಿ ಮನೆಮನೆಗೂ ಬೆಳಕು ನೀಡುವ ವಿದ್ಯುತ್ ಇಲಾಖೆಯ ಸಿಬ್ಬಂದಿಗಳ ಸೇವೆ ಅಪಾರವಾಗಿದೆ. ಇಂತಹ ಒತ್ತಡದ ಕೆಲಸದ ನಡುವೆ ಸಿಬ್ಬಂದಿಗೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಸಮಯ ಸಿಗುವುದಿಲ್ಲ. ಈ ಹಿನ್ನೆಲೆಯಲ್ಲಿ ರೆಡ್ ಕ್ರಾಸ್ ಸಂಸ್ಥೆ ಹಾಗೂ ವಿವಿಧ ಆಸ್ಪತ್ರೆಗಳ ಸಹಯೋಗದಲ್ಲಿ ಸಿಬ್ಬಂದಿ, ಹೊರಗುತ್ತಿಗೆ ನೌಕರರು ಮತ್ತು ಅವರ ಕುಟುಂಬದವರಿಗಾಗಿ ಆರೋಗ್ಯ ಶಿಬಿರ ಆಯೋಜಿಸಲಾಗಿದೆ ಎಂದರು.
ಶಿಬಿರದಲ್ಲಿ ಉಚಿತ ಕಣ್ಣಿನ ತಪಾಸಣೆ, ರಕ್ತದೊತ್ತಡ, ಮಧುಮೇಹ, ಹೃದಯ ತಪಾಸಣೆ, ಇಸಿಜಿ, ಕ್ಯಾನ್ಸರ್ ತಪಾಸಣೆ ಹಾಗೂ ಮಹಿಳೆಯರಿಗೆ ಪ್ಯಾಪ್ ಸ್ಮಿಯರ್ (Pap Smear) ಪರೀಕ್ಷೆ ಸೇರಿದಂತೆ ವಿವಿಧ ವೈದ್ಯಕೀಯ ಸೇವೆಗಳನ್ನು ಒದಗಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಯಪ್ಪ ಹಾಗೂ ಇಂಜಿನಿಯರ್ ಪರಮೇಶ್, ವಿದ್ಯುತ್ ಇಲಾಖೆಯ ಸಿಬ್ಬಂದಿ ನಿರಂತರ ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುತ್ತಿದ್ದು, ಇಂತಹ ಆರೋಗ್ಯ ಶಿಬಿರಗಳು ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ಬಹಳ ಉಪಯುಕ್ತವಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶಿಬಿರದಲ್ಲಿ 186ಕ್ಕೂ ಹೆಚ್ಚು ಸಿಬ್ಬಂದಿಗೆ ಆರೋಗ್ಯ ತಪಾಸಣೆ ನಡೆಸಲಾಗಿದ್ದು, 34 ಮಂದಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು.
ಕಾರ್ಯಕ್ರಮದಲ್ಲಿ ಪರಮೇಶ್, ಜಯಪ್ಪ, ಚಂದ್ರಶೇಖರ್, ಮಂಗಳ, ರಾಜಣ್ಣ, ಗೋವಿಂದಸ್ವಾಮಿ ಸೇರಿದಂತೆ ಕೆಇಬಿ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.
– ಮಂಜುನಾಥ್ ಐ.ಕೆ.
