ಚನ್ನರಾಯಪಟ್ಟಣ, ಜು. 21: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲ್ಲೂಕು ಘಟಕ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಹಾಗೂ ಹಾಸನದ ಜನಪ್ರಿಯ ಆಸ್ಪತ್ರೆಯ ಸಹಯೋಗದಲ್ಲಿ ಪಟ್ಟಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ಯುವ ಮುಖಂಡ ಸಿ.ಆರ್. ಚಿದಾನಂದ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಮಾಜಮುಖಿ ಸೇವೆಗಳಲ್ಲಿ ಮುಂಚೂಣಿಯಲ್ಲಿದ್ದು, ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದರು. ಎಬಿವಿಪಿ ಚನ್ನರಾಯಪಟ್ಟಣದಲ್ಲಿ ಇನ್ನಷ್ಟು ಬಲಿಷ್ಠವಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಜಿ. ಭರತ್ ಕುಮಾರ್ ಮಾತನಾಡಿ, ತಾಲೂಕಿನಲ್ಲಿ ಇದುವರೆಗೆ 13 ಸಾವಿರಕ್ಕೂ ಹೆಚ್ಚು ಜನರಿಗೆ ಆರೋಗ್ಯ ತಪಾಸಣಾ ಶಿಬಿರ, ಕಣ್ಣಿನ ಶಸ್ತ್ರಚಿಕಿತ್ಸೆ ಹಾಗೂ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಸಾವಿರಾರು ಜನರಿಗೆ ನೆರವಾಗಿದ್ದೇವೆ ಎಂದು ತಿಳಿಸಿದರು. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಧ್ವನಿಯಾಗಿರುವ ಎಬಿವಿಪಿ ಸಂಸ್ಥೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬೆಂಬಲಿಸಬೇಕು ಎಂದು ಕರೆ ನೀಡಿದರು.

ಪರಿಸರ ಪ್ರೇಮಿ ಸಿ.ಎನ್. ಅಶೋಕ್ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ರೆಡ್ ಕ್ರಾಸ್ ಸಂಸ್ಥೆ ನೀಡುತ್ತಿರುವ ಆರೋಗ್ಯ ಸೇವೆ ಶ್ಲಾಘನೀಯವಾಗಿದ್ದು, ಎಬಿವಿಪಿ ಸಹ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಬೇಕು ಎಂದು ಹೇಳಿದರು.

ಎಬಿವಿಪಿ ಹಾಸನ ಜಿಲ್ಲಾ ಸಂಚಾಲಕ ಕಾಂತರಾಜು ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿ ಹಾಗೂ ಹಕ್ಕುಗಳ ರಕ್ಷಣೆಗೆ ಎಬಿವಿಪಿ ಸದಾ ಬದ್ಧವಾಗಿದ್ದು, ವಿದ್ಯಾರ್ಥಿಗಳು ಸಂಸ್ಥೆಯ ಸೇವೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಜಬಿವುಲ್ಲಾ ಬೇಗ್ ಮಾಹಿತಿ ನೀಡಿ, ಜನಪ್ರಿಯ ಆಸ್ಪತ್ರೆ, ಅಗರ್ವಾಲ್ ಕಣ್ಣಿನ ಆಸ್ಪತ್ರೆ, ಪುನರ್ಜೀವ ಸ್ವಯಂಸೇವಾ ಸಂಸ್ಥೆ ಹಾಗೂ ಸ್ವಯಂ ಪ್ರೇರಿತ ರಕ್ತ ಕೇಂದ್ರದ ಸಹಯೋಗದಲ್ಲಿ ನಡೆದ ಶಿಬಿರದಲ್ಲಿ 267 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಕಣ್ಣಿನ ತಪಾಸಣೆ ನಡೆಸಲಾಗಿದೆ. ಜೊತೆಗೆ 113ಕ್ಕೂ ಹೆಚ್ಚು ಸಾರ್ವಜನಿಕರಿಗೆ ಹೃದಯ, ಕೀಲು-ಮೂಳೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಇಸಿಜಿ (ECG) ಸೇರಿದಂತೆ ವಿವಿಧ ಆರೋಗ್ಯ ಸೇವೆಗಳನ್ನು ಒದಗಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಮಾರಿ ಮಮತಾ ಚೌದರಿ, ಎಬಿವಿಪಿ ಚನ್ನರಾಯಪಟ್ಟಣ ಘಟಕದ ಅಧ್ಯಕ್ಷರು ವಹಿಸಿದ್ದರು.
ಈ ಸಂದರ್ಭದಲ್ಲಿ ಸಮಾಜಸೇವಕರಾದ ಗಜಾನನ ಮನೋಹರ್, ರೆಡ್ ಕ್ರಾಸ್ ಖಜಾಂಚಿ ಕಿಶೋರ್ ಕುಮಾರ್ ಸಿ.ಎಸ್., ಹೃದಯ ತಜ್ಞ ಡಾ. ಮಂಜುನಾಥ್, ಡಾ. ಚೇತನ್, ಅಗರ್ವಾಲ್ ಕಣ್ಣಿನ ಆಸ್ಪತ್ರೆಯ ವ್ಯವಸ್ಥಾಪಕ ಹರ್ಷಿತ್, ಚಂದನ್, ಪ್ರಮೋದ್, ಎಬಿವಿಪಿ ಜಿಲ್ಲಾ ಸಂಚಾಲಕ ರವಿ, ಭರತ್, ಸ್ಮಿತಾ ಸೇರಿದಂತೆ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
– ಮಂಜುನಾಥ್ ಐ.ಕೆ
