ಚನ್ನರಾಯಪಟ್ಟಣ: ತಾಲೂಕಿನ ದಂಡಿಗನಹಳ್ಳಿ ಹೋಬಳಿಯ ಬರಗೂರು ಚೌಡೇನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಈಶ್ವರ ದೇವಾಲಯವನ್ನು ಹೊಳೆನರಸೀಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಮತ್ತು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಧಾರ್ಮಿಕ ವಿಧಿವಿಧಾನಗಳೊಂದಿಗೆ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಚ್.ಡಿ. ರೇವಣ್ಣ, ಬರಗೂರು ಗ್ರಾಮದಲ್ಲಿ ಹಲವು ದೇವಾಲಯಗಳು ನಿರ್ಮಾಣವಾಗಿರುವುದರಿಂದ ಗ್ರಾಮವು ಪುಣ್ಯಕ್ಷೇತ್ರವಾಗಿ ರೂಪುಗೊಂಡಿದೆ ಎಂದರು.
ಈಶ್ವರ ದೇವಾಲಯ, ಲಕ್ಷ್ಮಿ ಚೆನ್ನಕೇಶವ ದೇವಾಲಯ, ದುರ್ಗಮ್ಮ ದೇವಾಲಯ, ಆಂಜನೇಯ ದೇವಾಲಯ, ಶನಿದೇವರ ದೇವಾಲಯ, ದೂತರಾಯ ದೇವಾಲಯ ಹಾಗೂ ದೊಡ್ಡಮ್ಮ ದೇವಾಲಯ ಸೇರಿದಂತೆ ಗ್ರಾಮದಲ್ಲಿ ಒಟ್ಟು ಎಂಟು ದೇವಾಲಯಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.

ಬರಗೂರು ಚೌಡೇನಹಳ್ಳಿ ಗ್ರಾಮವು ನಮ್ಮ ಕುಟುಂಬಕ್ಕೆ ರಾಜಕೀಯವಾಗಿ ಶಕ್ತಿ ತುಂಬಿದ ಪ್ರಮುಖ ಗ್ರಾಮವಾಗಿದೆ. ಗ್ರಾಮದ ಅಭಿವೃದ್ಧಿಗಾಗಿ ನಮ್ಮ ಕುಟುಂಬ ನಿರಂತರವಾಗಿ ಶ್ರಮಿಸುತ್ತಾ ಬಂದಿದೆ. ಮೂರು ಏತ ನೀರಾವರಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಕೆಲವರು ಏತ ನೀರಾವರಿ ಯೋಜನೆಗಳು ತಮ್ಮಿಂದಲೇ ಜಾರಿಯಾಗಿವೆ ಎಂದು ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎಂದು ಟೀಕಿಸಿದರು.
ಮುಂದಿನ ದಿನಗಳಲ್ಲಿಯೂ ಬರಗೂರು ಚೌಡೇನಹಳ್ಳಿ ಗ್ರಾಮದ ಅಭಿವೃದ್ಧಿಗೆ ನಮ್ಮ ಕುಟುಂಬ ಸದಾ ಬದ್ಧವಾಗಿದ್ದು, ಅಗತ್ಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಟೀಕಿಸಿದ ಅವರು, ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಆರ್ಥಿಕ ಪರಿಸ್ಥಿತಿಗೆ ಹೊಡೆತ ಬಿದ್ದಿದೆ. ಕೆಎಸ್ಆರ್ಟಿಸಿ ಬಸ್ಗಳಿಗೆ ಡೀಸೆಲ್ ಒದಗಿಸಲೂ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು. ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯಡಿ ₹2,000 ನೀಡುತ್ತಿದ್ದರೂ ಮತ್ತೊಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದೇ ಸರ್ಕಾರದ ಸಾಧನೆ ಎಂದು ಲೇವಡಿ ಮಾಡಿದರು.

ತಾವು ಇಂಧನ ಸಚಿವರಾಗಿದ್ದ ಸಂದರ್ಭದಲ್ಲಿ ನಿರಂತರ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಪ್ರಸ್ತುತ ಸರ್ಕಾರದ ಅವಧಿಯಲ್ಲಿ ರೈತರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಬರಗೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಗುರುಸ್ವಾಮಿ, ಲಕ್ಷ್ಮಣಗೌಡ, ಕೊಬ್ಬರಿ ಮಂಡಿ ಚಂದ್ರು, ಲಕ್ಷ್ಮಣ್, ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಲತಾ ಮಂಜೇಗೌಡ, ಶಶಿಕಲಾ ರವೀಂದ್ರ, ಶಂಕರಾಚಾರ್ಯ, ಗುಡಿಗೌಡರಾದ ರಾಮಕೃಷ್ಣಗೌಡ, ಪಟೇಲ್ ನಾಗೇಶ್, ಅರ್ಚಕರಾದ ದೊರೆಸ್ವಾಮಿ, ಶಾಂತರಾಜು, ವಿಜಯಕುಮಾರ್, ಕಾಂತರಾಜು ಸೇರಿದಂತೆ ಬರಗೂರು ಚೌಡೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮುಖಂಡರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
– ಮಂಜುನಾಥ್ ಐ.ಕೆ.
