ಚನ್ನರಾಯಪಟ್ಟಣ – ಪಟ್ಟಣದ ಕರ್ನಾಟಕ ಬ್ಯಾಂಕ್ ಮುಂಭಾಗದಲ್ಲಿರುವ ಮುತ್ತೂಟ್ ಮಿನಿ ಫೈನಾನ್ಸ್ ಕಚೇರಿ ಎದುರು, ಹೌಸಿಂಗ್ ಬೋರ್ಡ್ ನಿವಾಸಿ ಶ್ರೀಮತಿ ಗೀತಾ ಅವರು ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯ ನಡುವೆಯೇ ಇಂದು ವಿಷ ಕುಡಿಯುವುದಾಗಿ ಎಚ್ಚರಿಕೆ ನೀಡಿದ ಘಟನೆ ಆತಂಕಕ್ಕೆ ಕಾರಣವಾಯಿತು.
ಪ್ರತಿಭಟನೆಯ ವೇಳೆ ಮಾತನಾಡಿದ ಗೀತಾ, “ಎರಡು ದಿನಗಳಿಂದ ನ್ಯಾಯಕ್ಕಾಗಿ ಧರಣಿ ನಡೆಸುತ್ತಿದ್ದರೂ ಸಿಬ್ಬಂದಿಗಳು ಯಾವುದೇ ಕ್ರಮ ಕೈಗೊಳ್ಳದೆ ನಮ್ಮನ್ನು ಉದಾಸೀನ ಮಾಡುತ್ತಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಯೊಳಗೆ ಸಮಸ್ಯೆಯನ್ನು ಬಗೆಹರಿಸದಿದ್ದರೆ ಇದೇ ಕಚೇರಿ ಮುಂಭಾಗ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರತಿಭಟನೆಯನ್ನು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷೆ ಶ್ರೀಮತಿ ನಾಗರತ್ನಮ್ಮ ಚಿನ್ನೇನಹಳ್ಳಿ ಅವರ ನೇತೃತ್ವದಲ್ಲಿ ಹಗಲು-ರಾತ್ರಿ ನಡೆಸಲಾಗುತ್ತಿದೆ. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ನಾಗರತ್ನಮ್ಮ, “ಮುತ್ತೂಟ್ ಮಿನಿ ಫೈನಾನ್ಸ್ 15 ಗ್ರಾಹಕರಿಗೆ ಮೋಸ ಮಾಡಿರುವ ದಾಖಲೆಗಳು ನಮ್ಮ ಬಳಿ ಇವೆ. ಬ್ಯಾಂಕಿನ ಮೇಲಾಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ, “ಇಂದು ಯಾವುದೇ ಅನಾಹುತ ಸಂಭವಿಸಿದರೆ ಅದರ ಸಂಪೂರ್ಣ ಹೊಣೆಗಾರಿಕೆ ಮುತ್ತೂಟ್ ಮಿನಿ ಫೈನಾನ್ಸ್ ಹಾಗೂ ತಾಲೂಕು ಆಡಳಿತದ ಮೇಲೇ ಇರುತ್ತದೆ” ಎಂದು ಅವರು ಎಚ್ಚರಿಕೆ ನೀಡಿದರು.
ಘಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಅಧಿಕಾರಿಗಳು ಶೀಘ್ರವಾಗಿ ಮಧ್ಯಸ್ಥಿಕೆ ವಹಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
