ಚನ್ನರಾಯಪಟ್ಟಣ, ಜೂ. 5: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜನನಿ ಸೇವಾ ಫೌಂಡೇಶನ್ ವತಿಯಿಂದ ಚನ್ನರಾಯಪಟ್ಟಣ ತಾಲೂಕು ಕಸಬಾ ಹೋಬಳಿಯ ಕುರುವಂಕ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಲಾಯಿತು. ಬಳಿಕ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಗೆ ಸಿಹಿ ಹಂಚಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಪದಾಧಿಕಾರಿಗಳು, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜನನಿ ಸೇವಾ ಫೌಂಡೇಶನ್ ಅಧ್ಯಕ್ಷ ಮಂಜುನಾಥ ಕುರುವಂಕ, ಉಪಾಧ್ಯಕ್ಷ ರುದ್ರೇಶ್, ಬಾಲಚಂದ್ರ, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಕಾರ್ಯದರ್ಶಿ ರಮೇಶ್, ಖಜಾಂಚಿ ವಿನೋದ್ ಪ್ರಸಾದ್ ಹಾಗೂ ಶಾಲೆಯ ಮುಖ್ಯ ಶಿಕ್ಷಕಿ ಕಮಲಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.
– ಮಂಜುನಾಥ್ ಐ.ಕೆ.
