ಚನ್ನರಾಯಪಟ್ಟಣ: ಪರ್ಯಾಯ ವ್ಯವಸ್ಥೆ ಕಲ್ಪಿಸದೆ ರಸ್ತೆ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ನೋಟಿಸ್ ನೀಡಿರುವ ಪುರಸಭೆ ಅಧಿಕಾರಿಗಳ ಕ್ರಮ ಖಂಡನೀಯ ಎಂದು ರಸ್ತೆ ಬದಿ ವ್ಯಾಪಾರಿಗಳ ಸಂಘದ ಗೌರವ ಅಧ್ಯಕ್ಷ ಸಿಎಂ ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆ ಬದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳ ಸಭೆ ಕರೆದು ವ್ಯಾಪಾರಿಗಳೊಂದಿಗೆ ಚರ್ಚಿಸಬೇಕು. ಪರ್ಯಾಯ ವ್ಯವಸ್ಥೆ ಕಲ್ಪಿಸಿದ ಬಳಿಕವೇ ತೆರವು ಕಾರ್ಯಾಚರಣೆ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಸ್ತೆ ಬದಿ ವ್ಯಾಪಾರಿಗಳ ಕುಟುಂಬ ಸದಸ್ಯರೊಂದಿಗೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಹಾಸನ ನಗರದ ಮಾಜಿ ಶಾಸಕ ಪ್ರೀತಂ ಜೆ. ಗೌಡ ಅವರು ರಸ್ತೆ ಬದಿ ವ್ಯಾಪಾರಿಗಳಿಗಾಗಿ ಫುಡ್ ಕೋರ್ಟ್ ನಿರ್ಮಿಸಿರುವ ಮಾದರಿಯಲ್ಲಿ ಚನ್ನರಾಯಪಟ್ಟಣದಲ್ಲಿಯೂ ಫುಡ್ ಕೋರ್ಟ್ ನಿರ್ಮಿಸಿ ವ್ಯಾಪಾರಿಗಳ ಹಿತ ಕಾಪಾಡಬೇಕು ಎಂದು ಆಗ್ರಹಿಸಿದರು.

ಪುರಸಭೆಯ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಜಗದೀಶ್ ಗಂಗಣ್ಣನವರ್ ಅವರು ಮಧ್ಯಪ್ರವೇಶಿಸಿ, ಪುರಸಭೆ ಮುಖ್ಯಾಧಿಕಾರಿಗಳಿಗೆ ರಸ್ತೆ ಬದಿ ವ್ಯಾಪಾರಿಗಳೊಂದಿಗೆ ಚರ್ಚಿಸಿದ ನಂತರವೇ ತೆರವು ಕಾರ್ಯಾಚರಣೆ ಕೈಗೊಳ್ಳುವಂತೆ ಸೂಚಿಸಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ, ನಗರದ ದೊಡ್ಡ ಕಟ್ಟಡಗಳಲ್ಲಿ ಪಾರ್ಕಿಂಗ್ ಸ್ಥಳಗಳನ್ನು ಬಾಡಿಗೆಗೆ ನೀಡಿರುವ ಕಟ್ಟಡ ಮಾಲೀಕರ ವಿರುದ್ಧವೂ ಪುರಸಭೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪಾರ್ಕಿಂಗ್ ಸ್ಥಳಗಳ ಸಮರ್ಪಕ ಬಳಕೆಯಿಂದ ರಸ್ತೆ ಬದಿಯಲ್ಲಿ ವಾಹನ ನಿಲುಗಡೆ ಕಡಿಮೆಯಾಗಿ ಸಂಚಾರ ಸುಗಮವಾಗಲಿದೆ. ಇದರಿಂದ ರಸ್ತೆ ಬದಿ ವ್ಯಾಪಾರಿಗಳ ಕುಟುಂಬಗಳ ಜೀವನೋಪಾಯಕ್ಕೂ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಅರಳಪುರ ಮಂಜೇಗೌಡ, ದಲಿತ ಸೇನಾ ಪಡೆಯ ಜಿಲ್ಲಾಧ್ಯಕ್ಷ ಹಾಗೂ ರಸ್ತೆ ಬದಿ ವ್ಯಾಪಾರಿಗಳ ಸಂಘದ ಗೌರವ ಅಧ್ಯಕ್ಷ ದಂಡೋರ ಮಂಜುನಾಥ್, ಸಂಘದ ಅಧ್ಯಕ್ಷ ಜಾವಿದ್ ಭಾಷಾ, ಕಾರ್ಯದರ್ಶಿ ಕೃಷ್ಣ ಸೇರಿದಂತೆ ನೂರಾರು ರಸ್ತೆ ಬದಿ ವ್ಯಾಪಾರಿಗಳು ಉಪಸ್ಥಿತರಿದ್ದರು.
– ಮಂಜುನಾಥ್ ಐ.ಕೆ.
