ಚನ್ನರಾಯಪಟ್ಟಣ, ಜು. 25: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 26ರಂದು (ಭಾನುವಾರ) ಬೆಲಸಿಂದ ಶ್ರೀವನದಲ್ಲಿ ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆಯನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ದಯಾನಂದ್ ಶೆಟ್ಟಿಹಳ್ಳಿ ತಿಳಿಸಿದ್ದಾರೆ.
ಕಾರ್ಯಕ್ರಮ ನಡೆಯಲಿರುವ ಸ್ಥಳವನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ವರ್ಷದಲ್ಲಿ ಒಮ್ಮೆ ಪತ್ರಕರ್ತರು ಮತ್ತು ಅವರ ಕುಟುಂಬದವರು ಒಂದೇ ವೇದಿಕೆಯಲ್ಲಿ ಸೇರಿ ಸಂಭ್ರಮಿಸುವ ವಿಶೇಷ ಕಾರ್ಯಕ್ರಮ ಇದಾಗಿದ್ದು, ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಕಾರ್ಯಕ್ರಮದಲ್ಲಿ ಗಣ್ಯರಿಂದ ಉದ್ಘಾಟನೆ, ಪತ್ರಕರ್ತರು ಹಾಗೂ ಪತ್ರಿಕಾ ವಿತರಕರಿಗೆ ಸನ್ಮಾನ, ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು. ಜೊತೆಗೆ ಪತ್ರಕರ್ತರ ಕುಟುಂಬ ಸದಸ್ಯರಿಗಾಗಿ ಕ್ರೀಡಾಕೂಟ ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದರು.

ಇದಲ್ಲದೆ ದಿನಪತ್ರಿಕೆಗಳ ಪ್ರದರ್ಶನ, ಕುಂಚ ಕಲಾವಿದರಿಂದ ಚಿತ್ರಕಲಾ ಪ್ರದರ್ಶನ, ಬೋಟಿಂಗ್ ವ್ಯವಸ್ಥೆ, ಬೆಳಗಿನ ಉಪಾಹಾರ, ಕಾಫಿ-ಟೀ, ಮಧ್ಯಾಹ್ನದ ಊಟ ಹಾಗೂ ಸಂಜೆ ತಿಂಡಿಯ ವ್ಯವಸ್ಥೆ ಮಾಡಲಾಗಿದೆ. ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಎಂ. ಪಟೇಲ್, ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಉಪಾಧ್ಯಕ್ಷ ಹೆಚ್.ಬಿ. ಮದನಗೌಡ, ಭಾರತೀಯ ಪತ್ರಕರ್ತರ ಒಕ್ಕೂಟದ ನಿರ್ದೇಶಕ ರವಿ ನಾಕಲಗೋಡು, ಜಿಲ್ಲಾಧ್ಯಕ್ಷ ಜೆ.ಆರ್. ಕೆಂಚೇಗೌಡ ಸೇರಿದಂತೆ ಹಲವು ಗಣ್ಯರು, ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರು ಭಾಗವಹಿಸಲಿದ್ದಾರೆ.
ವೇದಿಕೆ ನಿರ್ಮಾಣದ ಸಿದ್ಧತೆಗಳ ಪರಿಶೀಲನೆ ವೇಳೆ ಪತ್ರಕರ್ತರಾದ ಸಿದ್ದರಾಜ್, ಎ. ನಟೇಶ್, ಎ.ಎಲ್. ನಾಗೇಶ್, ಶಾಮಸುಂದರ್ ಕೆ. ಅಣ್ಣೇನಹಳ್ಳಿ, ಜಿ4 ಗೋವಿಂದ, ನಾಗೇಂದ್ರ ರಾಯ, ಪಾಂಡುರಂಗ ಸೇರಿದಂತೆ ಇತರರು ಉಪಸ್ಥಿತರಿದ್ದರು.
– ಮಂಜುನಾಥ್ ಐ ಕೆ
