ಚನ್ನರಾಯಪಟ್ಟಣ: ಹಾಸನ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪಟ್ಟಣದ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆ.27ರಂದು ಬೆಳಿಗ್ಗೆ 10.30ಕ್ಕೆ ಯುವಸೌರಭ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ವೇದಿಕೆ ಕಾರ್ಯಕ್ರಮದ ಬಳಿಕ ದೇಸಿ ಸಂಸ್ಕೃತಿಯನ್ನು ಬಿಂಬಿಸುವ ವಿವಿಧ ಕಲಾಪ್ರಕಾರಗಳ ನೃತ್ಯ ವೈಭವ ಅನಾವರಣಗೊಳ್ಳಲಿದೆ. ಕಂಸಾಳೆ, ರಂಗ ಕುಣಿತ, ಭರತನಾಟ್ಯ, ಸಮೂಹ ಗಾಯನ, ಚಂಡೆವಾದ್ಯ, ಡೊಳ್ಳು ಕುಣಿತ ಹಾಗೂ ಕಿರು ನಾಟಕಗಳ ಪ್ರದರ್ಶನ ನಡೆಯಲಿದೆ.
ಹಾಸನ, ಅರಕಲಗೂಡು, ಚನ್ನರಾಯಪಟ್ಟಣ, ಅರಸೀಕೆರೆ ಹಾಗೂ ಉಡುಪಿ ಭಾಗದ ಕಲಾತಂಡಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ. ಇದರೊಂದಿಗೆ ಪಟ್ಟಣದ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜು ಹಾಗೂ ಬಿಜಿಎಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ.
ಆದಿಚುಂಚನಗಿರಿ ಹಾಸನ–ಕೊಡಗು ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ಸಿ.ಎನ್. ಬಾಲಕೃಷ್ಣ, ಸಂಸದ ಶ್ರೇಯಸ್ ಎಂ. ಪಟೇಲ್, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಮೈಸೂರು ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕಿ ನಿರ್ಮಲಾ ಮಠಪತಿ, ತಹಶೀಲ್ದಾರ್ ಜಿ.ಎಸ್. ಶಂಕರಪ್ಪ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ತಾರಾನಾಥ್ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವರದಿ : ಐ ಕೆ ಮಂಜುನಾಥ್
