ಚನ್ನರಾಯಪಟ್ಟಣ : ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಕಳೆದ ಎರಡೂವರೆ ವರ್ಷಗಳಲ್ಲಿ ಜನರಿಗೆ ನೇರವಾಗಿ ₹1.20 ಲಕ್ಷ ಕೋಟಿ ಹಣವನ್ನು ತಲುಪಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೇಳಿದರು.
ಪಟ್ಟಣದ ವಾರ್ಡ್ ನಂ. 2ರಲ್ಲಿ ರೈಲ್ವೆ ನಿಲ್ದಾಣ ರಸ್ತೆಯಲ್ಲಿನ ನೂತನ ಕಾಂಗ್ರೆಸ್ ಭವನ ನಿರ್ಮಾಣ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, “ಜನರ ಕೈಗೆ ಇಷ್ಟೊಂದು ಹಣವನ್ನು ನೇರವಾಗಿ ನೀಡಿದ ಸರ್ಕಾರ ಪ್ರಪಂಚದಲ್ಲೇ ಇದ್ದರೆ ಅದು ಕರ್ನಾಟಕದ ಕಾಂಗ್ರೆಸ್ ಸರ್ಕಾರ. ಯಾವುದೇ ಏಜೆಂಟ್, ಮಧ್ಯವರ್ತಿ ಅಥವಾ ಕಮಿಷನ್ ಇಲ್ಲದೆ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸಲಾಗಿದೆ” ಎಂದು ತಿಳಿಸಿದರು.
ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ತಿಂಗಳಿಗೆ ಐದಾರು ಸಾವಿರ ರೂಪಾಯಿವರೆಗೆ ನೆರವು ದೊರೆಯುತ್ತಿದೆ. ಜಾತಿ, ಧರ್ಮ, ಪಕ್ಷ ಬೇಧವಿಲ್ಲದೆ ಎಲ್ಲರನ್ನೂ ಸಮಾನವಾಗಿ ಪರಿಗಣಿಸಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಸಮಾಜದ ಎಲ್ಲ ವರ್ಗಗಳನ್ನು ಸಮಾನವಾಗಿ ತೆಗೆದುಕೊಂಡು ಹೋದಾಗ ಮಾತ್ರ ಕರ್ನಾಟಕದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ಮುಂದಿನ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಪುರಸಭೆ ಹಾಗೂ ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕರ್ತರು ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಲಾಭಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಟ್ಟು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಕರೆ ನೀಡಿದರು.
ಈ ವೇಳೆ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ , ತಾಲೂಕಿನಲ್ಲಿ ಕಾಂಗ್ರೆಸ್ ಭವನ ನಿರ್ಮಾಣವು ದಶಕಗಳ ಕನಸಾಗಿದ್ದು, ಮುಖ್ಯಮಂತ್ರಿ ಮಾರ್ಗದರ್ಶನ, ಉಪ ಮುಖ್ಯಮಂತ್ರಿ ಹಾಗೂ ಸಚಿವ ಕೃಷ್ಣ ಬೈರೇಗೌಡ ಅವರ ನಾಯಕತ್ವದಲ್ಲಿ ಸಾಕಾರಗೊಳ್ಳುತ್ತಿದೆ ಎಂದರು.

ಸ್ಥಳೀಯ ಕಾರ್ಯಕರ್ತರು ಹಾಗೂ ಮುಖಂಡರ ಸಹಕಾರದೊಂದಿಗೆ ಎರಡು ಅಂತಸ್ತಿನ ಸುಸಜ್ಜಿತ ಭವನ ನಿರ್ಮಾಣ ಮಾಡಲಾಗುವುದು. ಎರಡನೇ ಮಹಡಿಯಲ್ಲಿ ವಿದ್ಯಾರ್ಥಿಗಳಿಗೆ ಕೋಚಿಂಗ್ ತರಗತಿಗಳು, ಮಹಿಳೆಯರ ಸಬಲೀಕರಣಕ್ಕಾಗಿ ಸ್ತ್ರೀಶಕ್ತಿ ಹಾಗೂ ಸ್ವಸಹಾಯ ಸಂಘಗಳ ಸದಸ್ಯೆಯರಿಗೆ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಎಂ. ರಾಮಚಂದ್ರ, ಎಂ.ಕೆ. ಮಂಜೇಗೌಡ ಸೇರಿದಂತೆ ಹಲವು ಮುಖಂಡರು ಮಾತನಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ವಿದ್ಯುತ್ ಕಾರ್ಖಾನೆ ಅಧ್ಯಕ್ಷ ಹೆಚ್.ಸಿ. ಲಲಿತ್ರಾಘವ್, ಹುಡಾ ಅಧ್ಯಕ್ಷ ಪಟೇಲ್ ಶಿವಪ್ಪ, ಸಿ.ವಿ. ರಾಜಪ್ಪ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಎಲ್.ಪಿ. ಪ್ರಕಾಶ್ಗೌಡ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
– ಮಂಜುನಾಥ್ ಐ.ಕೆ.
