ಹಾಸನ- ಹಾಸನ ನಗರ ಅಭಿವೃದ್ಧಿ ಪ್ರಾಧಿಕಾರ(ಹುಡಾ)ಕ್ಕೆ ಕೂಡಲೇ ಅಧ್ಯಕ್ಷರನ್ನು ನೇಮಕ ಮಾಡಬೇಕು ಹಾಗೂ ಹಾಸನ ವಿಧಾನಸಭಾ ಕ್ಷೇತ್ರದವರಿಗೆ ಮೊದಲ ಆದ್ಯತೆ ನೀಡುವಂತೆ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡುವರೆ ವರ್ಷ ಕಳೆದಿದೆ ಆದರೆ ನಗರಾಭಿವೃದ್ಧಿ ಸೇರಿದಂತೆ ಇತರೆ ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕ ಮಾಡಲಾಗಿಲ್ಲ. ಈ ನಡುವೆ ಹುಡಾ ಅಧ್ಯಕ್ಷ ಸ್ಥಾನಕ್ಕೆ ಹಾಸನ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ ಬೇರೆ ಕ್ಷೇತ್ರದ ಮುಖಂಡರ ಹೆಸರು ಕೇಳಿ ಬರುತ್ತಿದ್ದು ಅವರಿಗೆ ಹುಡಾ ಅಧ್ಯಕ್ಷ ಸ್ಥಾನ ನೀಡಿದರೆ ಸ್ಥಳೀಯರಿಗೆ ಅನ್ಯಾಯವಾಗುತ್ತದೆ ಎಂದು ಹೇಳಿದರು.
ಹುಡಾ ಅಧ್ಯಕ್ಷರ ನೇಮಕ ಸಂಬಂಧ ಈಗಾಗಲೇ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಉಸ್ತುವಾರಿ ಸಚಿವರು, ಸಂಸದರು ಹಾಗೂ ಸಂಬಂಧಪಟ್ಟ ಸಚಿವರಿಗೆ ಮನವಿ ಮಾಡಲಾಗಿದೆ. ನಮ್ಮ ಮನವಿಯನ್ನು ಪುರಸ್ಕರಿಸುವುದಾಗಿ ಎಲ್ಲರೂ ಭರವಸೆ ನೀಡಿದ್ದಾರೆ. ಈ ನಡುವೆ ಅರಸೀಕೆರೆ ವಿಧಾನಸಭಾ ಕ್ಷೇತ್ರದವರಿಗೆ ಹುಡಾ ಅಧ್ಯಕ್ಷ ಸ್ಥಾನ ದೊರೆಯಲಿದೆ ಎಂಬ ವಿಚಾರ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಹಾಗೆನಾದರೂ ನಮ್ಮ ಮನವಿ ವಿರುದ್ಧವಾಗಿ ಅಧ್ಯಕ್ಷರ ನೇಮಕವಾದಲ್ಲಿ ಪ್ರತಿಭಟನೆಯ ಹಾದಿ ಹಿಡಿಯುವುದಾಗಿ ಎಚ್ಚರಿಸಿದರು.
ಹುಡಾ ಅಧ್ಯಕ್ಷ ಸ್ಥಾನಕ್ಕೆ ಚನ್ನರಾಯಪಟ್ಟಣದ ಶಂಕರ್, ಅರಕಲಗೂಡಿನ ಪ್ರಭಾವಿ ಮುಖಂಡರು ಹಾಗೂ ಹಾಸನದ ಹೆಚ್.ಕೆ ಮಹೇಶ್ ಅವರ ಹೆಸರುಗಳು ಕೆಲ ಪತ್ರಿಕೆಗಳಲ್ಲಿ ಉಲ್ಲೇಖಿಸಲಾಗಿದೆ ಆದರೆ ಮುಂದಿನ ಚುನಾವಣೆ ಹಿತ ದೃಷ್ಟಿಯಿಂದ ಹಾಸನ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹಾಸನ ವಿಧಾನಸಭಾ ಕ್ಷೇತ್ರದವರನ್ನು ಆಯ್ಕೆ ಮಾಡಿದರೆ ಹೆಚ್ಚು ಅನುಕೂಲವಾಗಲಿದೆ ಹಾಗೂ ಸಂಘಟನೆ ದೃಷ್ಟಿಯಿಂದಲೂ ಹಾಸನ ಕ್ಷೇತ್ರದ ಕಾರ್ಯಕರ್ತರು ಅಥವಾ ಮುಖಂಡರನ್ನು ನೇಮಿಸುವಂತೆ ಒತ್ತಾಯಿಸಿದರು.
ಕಾಂಗ್ರೆಸ್ ಮುಖಂಡರಾದ ನವೀದ್ ಅಹಮದ್, ವಿನೋದ್ ಕುಮಾರ್, ಅಗಿಲೆ ಗುರು,ಆರಿಫ್ ಖಾನ್, ನಯಾಜ್,ಆಲ್ವಿನ್ ಇತರರು ಉಪಸ್ಥಿತರಿದ್ದರು.
