ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಆರೋಗ್ಯ ಇಲಾಖೆಯ ಆದೇಶವನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಂಗಳೂರಿನಲ್ಲಿ ಬೃಹತ್ ಮೆರವಣಿಗೆ ಹಾಗೂ ಪ್ರತಿಭಟನಾ ಸಭೆ ನಡೆಸಿತು.
ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಹೊರಟ ಮೆರವಣಿಗೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಮೆರವಣಿಗೆಯುದ್ದಕ್ಕೂ ಆರೋಗ್ಯ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಘೋಷಣೆಗಳು ಮೊಳಗಿದವು. ಬಳಿಕ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನಾ ಸಭೆ ನಡೆಯಿತು.
ಪ್ರತಿಭಟನಾ ಸಭೆಯ ಅಧ್ಯಕ್ಷತೆಯನ್ನು ಕೆ. ಯಾದವ ಶೆಟ್ಟಿ ವಹಿಸಿದ್ದರು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಮುನೀರ್ ಕಾಟಿಪಳ್ಳ, “ದಕ್ಷಿಣ ಕನ್ನಡ ಜಿಲ್ಲೆ ಖಾಸಗಿ ಮೆಡಿಕಲ್ ಕಾಲೇಜುಗಳು ಹಾಗೂ ಕಾರ್ಪೊರೇಟ್ ಆಸ್ಪತ್ರೆಗಳ ಹಿಡಿತಕ್ಕೆ ಸಿಲುಕಿದೆ. ಮಂಗಳೂರನ್ನು ಉತ್ತಮ ಚಿಕಿತ್ಸೆ ದೊರೆಯುವ ನಗರ ಎಂದು ಹೇಳಲಾಗುತ್ತಿದ್ದರೂ, ವಾಸ್ತವದಲ್ಲಿ ಖಾಸಗಿ ಆಸ್ಪತ್ರೆಗಳು ಸಾಮಾನ್ಯ ಜನರಿಗೆ ಸುಲಿಗೆಯ ಕೇಂದ್ರಗಳಾಗಿವೆ” ಎಂದು ಆರೋಪಿಸಿದರು.
“ಖಾಸಗಿ ಆಸ್ಪತ್ರೆಗಳ ದುಬಾರಿ ವೆಚ್ಚ ಭರಿಸಲಾಗದೆ ಅನೇಕ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ದೇಣಿಗೆ ಸಂಗ್ರಹಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಸಂಸ್ಥೆಗಳಿಗೆ ಹಸ್ತಾಂತರಿಸುವುದು ಬಡಜನರ ಆರೋಗ್ಯ ಹಕ್ಕಿನ ನಿರಾಕರಣೆಯಾಗಿದೆ” ಎಂದು ಅವರು ಹೇಳಿದರು.

ಸರಕಾರಿ ಆಸ್ಪತ್ರೆಗಳ ಖಾಸಗೀಕರಣವು ಸಾರ್ವಜನಿಕ ಆರೋಗ್ಯ ಸೇವೆಯನ್ನು ಸಂಪೂರ್ಣ ಖಾಸಗೀಕರಣದತ್ತ ಕೊಂಡೊಯ್ಯಲಿದ್ದು, ಬಡ ರೋಗಿಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳ ಕಲಿಕಾ ಸಾಧನಗಳನ್ನಾಗಿ ಮಾಡುತ್ತದೆ ಎಂದು ಆರೋಪಿಸಿದ ಅವರು, ಸರ್ಕಾರ ಆದೇಶ ಹಿಂಪಡೆಯದಿದ್ದರೆ ಜಿಲ್ಲೆಯಾದ್ಯಂತ ಹೋರಾಟ ವಿಸ್ತರಿಸಲಾಗುವುದು ಎಂದು ಎಚ್ಚರಿಸಿದರು.
“ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ರಸ್ತೆಯಲ್ಲಿ ತಡೆದು ಕಪ್ಪು ಬಾವುಟ ಪ್ರದರ್ಶಿಸಲಾಗುವುದು” ಎಂದು ಮುನೀರ್ ಕಾಟಿಪಳ್ಳ ಎಚ್ಚರಿಕೆ ನೀಡಿದರು.
ಈ ವೇಳೆ ಮಾತನಾಡಿದ ಸುನಿಲ್ ಕುಮಾರ್ ಬಜಾಲ್, “ಆರೋಗ್ಯ ಕ್ಷೇತ್ರದ ಖಾಸಗೀಕರಣವನ್ನು ಯಾವುದೇ ಕಾರಣಕ್ಕೂ ಒಪ್ಪಲಾಗದು. ಕಾಂಗ್ರೆಸ್ ಸರ್ಕಾರದ ಈ ತೀರ್ಮಾನವನ್ನು ಬಿಜೆಪಿ ಶಾಸಕರು ಪ್ರಶ್ನಿಸದಿರುವುದು, ಈ ಒಪ್ಪಂದದಲ್ಲಿ ಬಿಜೆಪಿಯೂ ಶಾಮೀಲಾಗಿರುವುದನ್ನು ತೋರಿಸುತ್ತದೆ” ಎಂದು ಆರೋಪಿಸಿದರು.
“ಖಾಸಗಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ಪರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ಕೆಲಸ ಮಾಡುತ್ತಿವೆ. ಸರಕಾರಿ ಆಸ್ಪತ್ರೆಗಳ ಖಾಸಗೀಕರಣದ ವಿಚಾರದಲ್ಲಿ ಬಿಜೆಪಿಯ ಮೌನವೇ ಇದಕ್ಕೆ ಸಾಕ್ಷಿ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸಭೆಯಲ್ಲಿ ಡಾ. ಕೃಷ್ಣಪ್ಪ ಕೊಂಚಾಡಿ, ಬಿ.ಎಂ. ಭಟ್, ವಸಂತ ಆಚಾರಿ, ಜಯಂತಿ ಶೆಟ್ಟಿ ಹಾಗೂ ಸುಕುಮಾರ್ ತೊಕ್ಕೊಟ್ಟು ಉಪಸ್ಥಿತರಿದ್ದರು.
ಜಿಲ್ಲಾ ಸಮಿತಿ ಸದಸ್ಯ ಮನೋಜ್ ವಾಮಂಜೂರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಸದಾಶಿವ ದಾಸ್ ವಂದಿಸಿದರು.
