ರಾಮನಾಥಪುರ: ದಕ್ಷಿಣ ಕಾಶಿ ಎಂದೇ ಪ್ರಖ್ಯಾತಿ ಪಡೆದಿರುವ ರಾಮನಾಥಪುರದ ಕಾವೇರಿ ನದಿ ದಂಡೆಯಲ್ಲಿರುವ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ಪ್ರತಿನಿತ್ಯ ಮಧ್ಯಾಹ್ನ ಅನ್ನದಾಸೋಹ ವ್ಯವಸ್ಥೆ ಪ್ರಾರಂಭಿಸಲಾಗಿದೆ.
ದೇವಾಲಯದ ಸಭಾಂಗಣದಲ್ಲಿ ಉತ್ಸವ ಹಾಗೂ ಮಹಾಮಂಗಳಾರತಿ ಪೂರ್ಣಗೊಂಡ ಬಳಿಕ ಕಳೆದ ಒಂದು ವಾರದಿಂದ ಪ್ರತಿನಿತ್ಯ ಅನ್ನದಾಸೋಹ ಸೇವೆ ಆರಂಭವಾಗಿದೆ. ಇದರಿಂದ ಕ್ಷೇತ್ರಕ್ಕೆ ಆಗಮಿಸುವ ಭಕ್ತರು, ಗ್ರಾಮಸ್ಥರು ಹಾಗೂ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯವರು ಸಂತಸ ವ್ಯಕ್ತಪಡಿಸಿ, ಈ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ಈ ಹಿಂದೆ ದೇವಾಲಯದಲ್ಲಿ ಹತ್ತಾರು ವರ್ಷಗಳಿಂದ ಪೂಜೆ ನೆರವೇರಿಸಿದವರಿಗೆ ಮಾತ್ರ ದಾಸೋಹದ ವ್ಯವಸ್ಥೆ ಇತ್ತು. ಆದರೆ ಇದೀಗ ಪ್ರತಿನಿತ್ಯ ಮಧ್ಯಾಹ್ನ ಮಹಾಪೂಜೆ ಬಳಿಕ ದೇವಾಲಯಕ್ಕೆ ಆಗಮಿಸುವ ಎಲ್ಲ ಭಕ್ತರಿಗೂ ಮಧ್ಯಾಹ್ನ 12 ಗಂಟೆಯಿಂದ 2 ಗಂಟೆಯವರೆಗೆ ಅನ್ನದಾಸೋಹ ವ್ಯವಸ್ಥೆ ಕಲ್ಪಿಸಲಾಗಿದೆ.

ಅಭಿನಂದನೆ ಸಲ್ಲಿಕೆ: ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಎಲ್ಲ ಭಕ್ತರಿಗೆ ಮಧ್ಯಾಹ್ನ ಊಟದ ವ್ಯವಸ್ಥೆ ಕಲ್ಪಿಸಿರುವ ಪ್ರಸನ್ನ ಶ್ರೀ ಸುಬ್ರಹ್ಮಣ್ಯಸ್ವಾಮಿ, ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀಗಳು, ದೇವಾಲಯದ ದಿವಾನರಾದ ಭಾಬಣ್ಣ ಹಾಗೂ ಆಡಳಿತ ಮಂಡಳಿಗೆ ಕ್ಷೇತ್ರದ ಶಾಸಕ ಎ. ಮಂಜು, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಗೌರವಾಧ್ಯಕ್ಷ ಆರ್.ಎಸ್. ನರಸಿಂಹಮೂರ್ತಿ, ಸಮಿತಿಯ ಅಧ್ಯಕ್ಷ ಎಂ.ಎನ್. ಕುಮಾರಸ್ವಾಮಿ, ಭಕ್ತರು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ: ದೇವಾಲಯದಲ್ಲಿ ನಡೆಯುವ ವಿಶೇಷ ಪೂಜಾ ಸೇವೆಗಳು ಹಾಗೂ ದಾಸೋಹ ವ್ಯವಸ್ಥೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ದೇವಾಲಯದ ವ್ಯವಸ್ಥಾಪಕ ವೇ. ಸೋಮಶೇಖರ್ ಅವರನ್ನು ಮೊಬೈಲ್ ಸಂಖ್ಯೆ 9964546947 ಅಥವಾ 8660436527 ಹಾಗೂ ಸಹಾಯಕ ವ್ಯವಸ್ಥಾಪಕ ವೇ. ಅಭಿಷೇಕ್ ಅವರನ್ನು 9482033754 ಸಂಖ್ಯೆಯಲ್ಲಿ ಸಂಪರ್ಕಿಸಬಹುದು ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
– ಕುಮಾರಸ್ವಾಮಿ ಎಂ.ಎನ್.
