ನವದೆಹಲಿ: ದೆಹಲಿಯ ಮಾಜಿ ಮುಖ್ಯ ಕಾರ್ಯದರ್ಶಿ ಹಾಗೂ 1975ರ ಬ್ಯಾಚ್ನ ನಿವೃತ್ತ ಐಎಎಸ್ ಅಧಿಕಾರಿ ರಾಕೇಶ್ ಮೆಹ್ತಾ (74) ಅವರು ನೋಯ್ಡಾದ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ.
ನೋಯ್ಡಾದ ಸೆಕ್ಟರ್ 82ರ ಕೇಂದ್ರೀಯ ವಿಹಾರ್-2 ಸೊಸೈಟಿಯಲ್ಲಿರುವ ತಮ್ಮ ಫ್ಲಾಟ್ನಲ್ಲಿ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೆಹ್ತಾ ಅವರು ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ನಡೆದ ಸಂದರ್ಭದಲ್ಲಿ ಅವರ ಪತ್ನಿ ಸುಮಂತಿ ಅವರು ಪುತ್ರನನ್ನು ಭೇಟಿಯಾಗಲು ಡೆಹ್ರಾಡೂನ್ಗೆ ತೆರಳಿದ್ದರು ಎನ್ನಲಾಗಿದೆ. ಪತಿ ದೂರವಾಣಿ ಕರೆಗಳಿಗೆ ಪ್ರತಿಕ್ರಿಯಿಸದ ಹಿನ್ನೆಲೆಯಲ್ಲಿ ಅವರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಬಾಗಿಲು ತೆರೆದು ಪರಿಶೀಲಿಸಿದಾಗ ಮೆಹ್ತಾ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಘಟನಾ ಸ್ಥಳದಲ್ಲಿ ಡೆತ್ನೋಟ್ವೊಂದು ಪತ್ತೆಯಾಗಿದ್ದು, ಅದರಲ್ಲಿ ತಮ್ಮ ಆರೋಗ್ಯ ಹಾಗೂ ಮಾನಸಿಕ ಸಮಸ್ಯೆಗಳ ಕುರಿತು ಉಲ್ಲೇಖಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಶೀಲಾ ದೀಕ್ಷಿತ್ ಅವಧಿಯಲ್ಲಿ ಪ್ರಮುಖ ಜವಾಬ್ದಾರಿ
1975ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದ ರಾಕೇಶ್ ಮೆಹ್ತಾ ಅವರು ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ಆಡಳಿತಾವಧಿಯಲ್ಲಿ ಹಲವು ಪ್ರಮುಖ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ದೆಹಲಿ ಮಹಾನಗರ ಪಾಲಿಕೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು.
2007ರಲ್ಲಿ ದೆಹಲಿಯ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡ ಅವರು ಮೂರು ವರ್ಷಗಳಿಗೂ ಹೆಚ್ಚು ಕಾಲ ಆ ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದರು. ರಾಜಧಾನಿಯಲ್ಲಿ ಸಾರಿಗೆ, ವಿದ್ಯುತ್ ಹಾಗೂ ನಾಗರಿಕ ಮೂಲಸೌಕರ್ಯಕ್ಕೆ ಸಂಬಂಧಿಸಿದ ಹಲವು ಪ್ರಮುಖ ಯೋಜನೆಗಳ ಅನುಷ್ಠಾನದಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.
2010ರಲ್ಲಿ ದೆಹಲಿಯಲ್ಲಿ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದ ಸಿದ್ಧತೆ ಮತ್ತು ಆಯೋಜನೆಯ ಅವಧಿಯಲ್ಲಿಯೂ ಅವರು ಆಡಳಿತಾತ್ಮಕ ಜವಾಬ್ದಾರಿ ನಿರ್ವಹಿಸಿದ್ದರು.
