ಬಣಕಲ್, ಜೂನ್ 1: ಬಣಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲಾಗುತ್ತಿದೆಯಾದರೂ, ಕೆಲವು ಮೂಲಭೂತ ಸವಾಲುಗಳು ಆಸ್ಪತ್ರೆಯ ಕಾರ್ಯನಿರ್ವಹಣೆಗೆ ಅಡ್ಡಿಯಾಗುತ್ತಿವೆ ಎಂದು ಸಾಮಾಜಿಕ ಕಾರ್ಯಕರ್ತ ಸಾಜೀದ್ ಬಣಕಲ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿ ಮತ್ತು ದಾದಿಯರ ಕೊರತೆ ಪ್ರಮುಖ ಸಮಸ್ಯೆಯಾಗಿದ್ದು, ವಿಶೇಷವಾಗಿ ಗ್ರಾಮೀಣ ಪ್ರದೇಶದ ಜನರಿಗೆ ಇದರಿಂದ ತೊಂದರೆಯಾಗುತ್ತಿದೆ ಎಂದು ಹೇಳಿದರು.
ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಆಸ್ಪತ್ರೆಯ ಮೂಲಸೌಕರ್ಯಗಳು ಹಾಗೂ ಸೌಲಭ್ಯಗಳನ್ನು ವಿಸ್ತರಿಸುವ ಅಗತ್ಯವಿದೆ. ರೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ದಟ್ಟಣೆ ಉಂಟಾಗುತ್ತಿದ್ದು, ಇದರಿಂದ ಸೇವೆಗಳ ಮೇಲೆ ಒತ್ತಡ ಹೆಚ್ಚುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.
ಇದಲ್ಲದೆ, ಆಸ್ಪತ್ರೆ ಆವರಣದಲ್ಲಿ ಸ್ವಚ್ಛತೆ ಮತ್ತು ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಬೇಕಿದ್ದು, ಕೆಲವೊಮ್ಮೆ ಸ್ವಚ್ಛತೆಯ ಕೊರತೆ ಕಂಡುಬರುತ್ತಿದೆ ಎಂದು ಗಮನ ಸೆಳೆದರು.
ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಸಮಸ್ಯೆಗಳ ಬಗ್ಗೆ ತಕ್ಷಣ ಗಮನಹರಿಸಿ, ಅಗತ್ಯ ಸಿಬ್ಬಂದಿ ನೇಮಕ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸ್ವಚ್ಛತಾ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸಾಜೀದ್ ಬಣಕಲ್ ಒತ್ತಾಯಿಸಿದರು
