ಚಿತ್ರದುರ್ಗ, ಜು. 25: ರಾಜ್ಯದಲ್ಲಿ ನಡೆಯುತ್ತಿರುವ ನೇಮಕಾತಿ ಪರೀಕ್ಷೆಗಳಲ್ಲಿ ಯಾವುದೇ ರೀತಿಯ ಅಕ್ರಮಕ್ಕೆ ಅವಕಾಶ ನೀಡುವುದಿಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳೇ ನೇರ ಹೊಣೆಗಾರರಾಗುತ್ತಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಠಿಣ ಎಚ್ಚರಿಕೆ ನೀಡಿದ್ದಾರೆ.
ಚಿತ್ರದುರ್ಗದ ಮುರುಘಾ ಮಠದ ಅನುಭವ ಮಂಟಪದಲ್ಲಿ ಶನಿವಾರ ನಡೆದ ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಹಾಗೂ ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.
ರಾಜ್ಯದಲ್ಲಿ ಸುಮಾರು 70 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದ್ದು, ನೇಮಕಾತಿ ಪರೀಕ್ಷೆಗಳು ಸಂಪೂರ್ಣ ಪಾರದರ್ಶಕ ಹಾಗೂ ಸುರಕ್ಷಿತವಾಗಿ ನಡೆಯುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.
ಪರೀಕ್ಷೆ ನಡೆಯುವ ಎಲ್ಲಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಪ್ರಶ್ನೆ ಪತ್ರಿಕೆ ತಯಾರಿಕೆ, ಸಂಗ್ರಹ, ಸಾಗಣೆ, ವಿತರಣೆ ಸೇರಿದಂತೆ ಪ್ರತಿಯೊಂದು ಹಂತವೂ ದಾಖಲೆಯಾಗಬೇಕು. ಇತ್ತೀಚೆಗೆ ನಡೆದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಎಲ್ಲರಿಗೂ ಎಚ್ಚರಿಕೆಯ ಪಾಠವಾಗಬೇಕು ಎಂದು ಹೇಳಿದರು.
“ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಅಧಿಕಾರಿಗಳೇ ಹೊಣೆ. ಯಾವುದೇ ನಿರ್ಲಕ್ಷ್ಯವನ್ನು ಸರ್ಕಾರ ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
ಸಭೆಯಲ್ಲಿ ಶಾಸಕರು ತಮ್ಮ ಕ್ಷೇತ್ರಗಳ ವಿವಿಧ ಸಮಸ್ಯೆಗಳನ್ನು ಪ್ರಸ್ತಾಪಿಸಿದ್ದು, ಶೀಘ್ರವಾಗಿ ಪರಿಹರಿಸಬಹುದಾದ ಸಮಸ್ಯೆಗಳನ್ನು ತಕ್ಷಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಾಸಕರು ಮಂಡಿಸಿದ ಪ್ರತಿಯೊಂದು ವಿಷಯವೂ ದಾಖಲಾಗಿ ಅನುಷ್ಠಾನಗೊಳ್ಳಬೇಕು ಎಂದು ನಿರ್ದೇಶಿಸಿದರು.
“ಜನರು ಸರ್ಕಾರದ ಬಾಗಿಲಿಗೆ ಬರಬಾರದು; ಸರ್ಕಾರವೇ ಜನರ ಮನೆ ಬಾಗಿಲಿಗೆ ತಲುಪಬೇಕು. ಅಧಿಕಾರಿಗಳು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಸರ್ಕಾರ ನೀಡಿರುವ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಂಡರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ” ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
