ಹಾಸನ, ಆ.15: ಯಾರೊಂದಿಗೂ ಸಂಘರ್ಷಕ್ಕೆ ಇಳಿಯದೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವುದೇ ತಮ್ಮ ಗುರಿ ಎಂದು ಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದರೂ ಯಾರೊಂದಿಗೂ ಸಂಘರ್ಷಕ್ಕೆ ಇಳಿದಿಲ್ಲ. ಜನರು ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ನಿರಂತರವಾಗಿ ಆಶೀರ್ವಾದ ಮಾಡುತ್ತಿದ್ದಾರೆ. ಮುಂದೆಯೂ ಜನರ ವಿಶ್ವಾಸಕ್ಕೆ ತಕ್ಕಂತೆ ಕೆಲಸ ಮಾಡುವುದಾಗಿ ತಿಳಿಸಿದರು.
ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ನೆನೆಗುದಿಗೆ ಬಿದ್ದಿರುವ ಪ್ರಮುಖ ಯೋಜನೆಗಳನ್ನು ಸವಾಲಾಗಿ ಸ್ವೀಕರಿಸಿ, ಮುಂದಿನ ಒಂದು ವರ್ಷದೊಳಗೆ ಸಾಧ್ಯವಾದಷ್ಟು ಕಾಮಗಾರಿಗಳನ್ನು ಪೂರ್ಣಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದರು.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಜಿಲ್ಲಾಧಿಕಾರಿ ಕಚೇರಿ ಕಾಮಗಾರಿ ಪೂರ್ಣಕ್ಕೆ ಕ್ರಮ
ಅನುದಾನದ ಕೊರತೆಯಿಂದ ಮಂದಗತಿಯಲ್ಲಿ ಸಾಗುತ್ತಿರುವ ಹಾಸನದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಗೆ ಅಗತ್ಯ ಅನುದಾನ ಒದಗಿಸಿ ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಕಾಮಗಾರಿಗೂ ಅಗತ್ಯ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಹೇಳಿದರು.
ಹಾಸನಕ್ಕೆ ಐಐಟಿ ತರಲು ಪಕ್ಷಾತೀತ ಹೋರಾಟ
ಹಾಸನ ಜಿಲ್ಲೆಗೆ ಐಐಟಿ ಮಂಜೂರು ಮಾಡಿಸಲು ಪಕ್ಷಾತೀತವಾಗಿ ಹೋರಾಟ ನಡೆಸಲಾಗುವುದು. ಐಐಟಿಗಾಗಿ ಈಗಾಗಲೇ ಜಾಗ ಮೀಸಲಿಟ್ಟಿದ್ದರೂ ಮಂಜೂರಾತಿ ದೊರೆತಿಲ್ಲ. ಸಂಸದ ಶ್ರೇಯಸ್ ಪಟೇಲ್ ಅವರು ಸಂಸತ್ನಲ್ಲಿ ಎರಡು ಬಾರಿ ಈ ವಿಚಾರ ಪ್ರಸ್ತಾಪಿಸಿದ್ದಾರೆ. ಕೇಂದ್ರದಿಂದ ನಿರೀಕ್ಷಿತ ಸ್ಪಂದನೆ ದೊರೆತಿಲ್ಲ ಎಂದು ಸಚಿವರು ಹೇಳಿದರು.
ಐಐಟಿ ವಿಚಾರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳ ನಾಯಕರು ಪಕ್ಷಭೇದ ಮರೆತು ಕೈಜೋಡಿಸಬೇಕು. ಅಗತ್ಯವಿದ್ದರೆ ಜಿಲ್ಲೆಯ ಬುದ್ಧಿಜೀವಿಗಳು, ಶಿಕ್ಷಣ ತಜ್ಞರು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರನ್ನು ಒಳಗೊಂಡ ವೇದಿಕೆ ರಚಿಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಾಗುವುದು. ಅಗತ್ಯವಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು ಎಂದರು.
ವಿಮಾನ ನಿಲ್ದಾಣ ಕಾಮಗಾರಿಗೆ ವೇಗ
ಹಾಸನ ವಿಮಾನ ನಿಲ್ದಾಣ ಕಾಮಗಾರಿ ಆರಂಭವಾಗಿ 15 ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ರಾಜ್ಯ ಸರ್ಕಾರದಿಂದ ನೀಡಬೇಕಾದ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು. ಕೇಂದ್ರದಿಂದ ದೊರೆಯಬೇಕಾದ ಅನುದಾನಕ್ಕಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಅರ್ಧಕ್ಕೆ ನಿಂತಿರುವ ಜಿಲ್ಲೆಯ ಎಲ್ಲ ಪ್ರಮುಖ ಯೋಜನೆಗಳನ್ನು ಪುನರಾರಂಭಿಸಿ ಪೂರ್ಣಗೊಳಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು ಎಂದರು.
ಹಾಸನಾಂಬ ಜಾತ್ರೆಗೆ ಅಚ್ಚುಕಟ್ಟಾದ ಸಿದ್ಧತೆ
ಹಾಸನಾಂಬ ದೇವಿ ಜಾತ್ರಾ ಮಹೋತ್ಸವವನ್ನು ಕಳೆದ ವರ್ಷದ ಮಾದರಿಯಲ್ಲೇ ಯಾವುದೇ ಲೋಪದೋಷಗಳಿಲ್ಲದೆ ನಡೆಸಲು ಕ್ರಮ ಕೈಗೊಳ್ಳಲಾಗುವುದು. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಮನ್ವಯದಿಂದ ಸಿದ್ಧತೆ ನಡೆಸಲಿದೆ ಎಂದು ಸಚಿವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಂಸದ ಶ್ರೇಯಸ್ ಪಟೇಲ್, ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತ್ ಸೇರಿದಂತೆ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
