ಕೊರಟಗೆರೆ:- ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ, ಅವುಗಳಿಗೆ ತ್ವರಿತ ಹಾಗೂ ಪರಿಣಾಮಕಾರಿ ಪರಿಹಾರ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಜಾಸೇವೆ ಆಂದೋಲನ ಕಾರ್ಯಕ್ರಮವನ್ನು ಶನಿವಾರ ಕೋಳಾಲದ ಪಾರ್ವತಿ–ಪರಮೇಶ್ವರ ಕಲ್ಯಾಣ ಮಂಟಪದಲ್ಲಿ ಹೋಬಳಿ ಮಟ್ಟದಲ್ಲಿ ಆಯೋಜಿಸಲಾಗಿತ್ತು.
ಉಪಮುಖ್ಯಮಂತ್ರಿ, ಕಂದಾಯ ಸಚಿವ ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಜಿ. ಪರಮೇಶ್ವರ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸಾರ್ವಜನಿಕರಿಂದ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿ, ಅವುಗಳ ತ್ವರಿತ ವಿಲೇವಾರಿಗೆ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಕಂದಾಯ, ಸರ್ವೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕೃಷಿ, ತೋಟಗಾರಿಕೆ, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆ, ಆಹಾರ ಮತ್ತು ನಾಗರಿಕ ಸರಬರಾಜು, ವಸತಿ, ಶಿಕ್ಷಣ ಹಾಗೂ ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಒಟ್ಟು 95 ಅರ್ಜಿಗಳನ್ನು ಸ್ವೀಕರಿಸಲಾಯಿತು. ಅರ್ಜಿಗಳನ್ನು ಸ್ವೀಕರಿಸುವುದರ ಜತೆಗೆ ಅರ್ಹ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ವತಿಯಿಂದ ಸ್ಥಳದಲ್ಲಿಯೇ ಅಗತ್ಯ ಸೇವೆಗಳನ್ನು ಒದಗಿಸಲಾಯಿತು.

ಸ್ಥಳದಲ್ಲೇ ಸೇವೆ, ಸೌಲಭ್ಯ
ಕಾರ್ಯಕ್ರಮದ ಅಂಗವಾಗಿ ವಿವಿಧ ಇಲಾಖೆಗಳ ಮಾಹಿತಿ ಹಾಗೂ ಸೇವಾ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು. SIR ಹಾಗೂ ಪಡಿತರ ಚೀಟಿಗೆ ಸಂಬಂಧಿಸಿದ ಇ–ಕೆವೈಸಿ (e-KYC) ಸೇವಾ ಮಳಿಗೆಗಳ ಮೂಲಕ ಸಾರ್ವಜನಿಕರಿಗೆ ಅಗತ್ಯ ಸೇವೆ ಒದಗಿಸಲಾಯಿತು. ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಮಳಿಗೆಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಯಿತು.
ಪಶುಪಾಲನಾ ಇಲಾಖೆಯ ವತಿಯಿಂದ ಫಲಾನುಭವಿಗಳಿಗೆ ಮಿನಿ ಕಿಟ್ಗಳನ್ನು ವಿತರಿಸಲಾಯಿತು. ಅರ್ಹ ಫಲಾನುಭವಿಗಳಿಗೆ ವಿ.ಬಿ.ಜಿ. ರಾಮ್ ಜಿ ಯೋಜನೆಯಡಿ ಜಾಬ್ ಕಾರ್ಡ್ ಸೇರಿದಂತೆ ವಿವಿಧ ಸರ್ಕಾರಿ ಸೌಲಭ್ಯಗಳನ್ನು ಒದಗಿಸಲಾಯಿತು.

ಕಾಲಮಿತಿಯಲ್ಲಿ ವಿಲೇವಾರಿಗೆ ಸೂಚನೆ
ಸಾರ್ವಜನಿಕರಿಂದ ಸ್ವೀಕರಿಸಲಾದ ಪ್ರತಿಯೊಂದು ಅಹವಾಲನ್ನೂ ಸಂಬಂಧಿಸಿದ ಇಲಾಖೆಗೆ ರವಾನಿಸಿ, ನಿಗದಿತ ಕಾಲಮಿತಿಯೊಳಗೆ ಪರಿಶೀಲಿಸಿ ಸೂಕ್ತ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಸ್ಥಳೀಯ ಮಟ್ಟದಲ್ಲಿಯೇ ಪರಿಹರಿಸಬಹುದಾದ ಸಮಸ್ಯೆಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡುವಂತೆ ನಿರ್ದೇಶನ ನೀಡಲಾಯಿತು.
ತಾಂತ್ರಿಕ ಅಥವಾ ಆಡಳಿತಾತ್ಮಕ ಅನುಮೋದನೆ ಅಗತ್ಯವಿರುವ ಅಹವಾಲುಗಳನ್ನೂ ಆದ್ಯತೆಯ ಮೇರೆಗೆ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಸೇವೆಗಳನ್ನು ಜನರ ಬಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಯಿತು.
ಸರ್ಕಾರದ ಸೇವೆ–ಜನರ ಮನೆಬಾಗಿಲಿಗೆ
ಪ್ರಜಾಸೇವೆ ಆಂದೋಲನದ ಮೂಲಕ ಸರ್ಕಾರದ ಸೇವೆಗಳು ಹಾಗೂ ಸೌಲಭ್ಯಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವುದು, ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಆಲಿಸಿ ತ್ವರಿತವಾಗಿ ಪರಿಹರಿಸುವುದು ಹಾಗೂ ಸರ್ಕಾರ ಮತ್ತು ಜನರ ನಡುವಿನ ನೇರ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸಿಇಒ ಅಶ್ವಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ತಹಸಿಲ್ದಾರ್ ಮಂಜುನಾಥ್, ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಅಪೂರ್ವ ಶಾಂತಾರಾಮ, ಟಿಪಿಓ ಮಧುಸೂದನ್, ಉಪತಹಸೀಲ್ದಾರ್ ಮಧುಚಂದ್ರ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
- ಶ್ರೀನಿವಾಸ್ ಕೊರಟಗೆರೆ
