ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚನ್ನರಾಯಪಟ್ಟಣ ತಾಲ್ಲೂಕು ಘಟಕ, ಪುನರ್ಜೀವ ಸ್ವಯಂ ಸೇವಾ ಸಂಸ್ಥೆ ಹಾಗೂ ರಚನಾ ಪಬ್ಲಿಕ್ ಸ್ಕೂಲ್, ಜಿನ್ನೇನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಕಿರಿಯ ರೆಡ್ ಕ್ರಾಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ, ಪ್ರಥಮ ಚಿಕಿತ್ಸೆ ಪೆಟ್ಟಿಗೆ, ಔಷಧಿ ಹಾಗೂ ಉಚಿತ ಮಾಸ್ಕ್ ವಿತರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚನ್ನರಾಯಪಟ್ಟಣ ತಾಲ್ಲೂಕು ಘಟಕದ ಅಧ್ಯಕ್ಷ ಭರತ್ ಕುಮಾರ್ ಹೆಚ್.ಜಿ., ಪ್ರತಿವರ್ಷ ಸರ್ಕಾರದ ಅನುಮತಿಯೊಂದಿಗೆ ಕಿರಿಯ ರೆಡ್ ಕ್ರಾಸ್ ಪರೀಕ್ಷೆ ನಡೆಸಲಾಗುತ್ತಿದ್ದು, ಈ ಬಾರಿ ಜನವರಿ 3, 2026ರಂದು ನಡೆದ ಪರೀಕ್ಷೆಯಲ್ಲಿ ತಾಲೂಕಿನ ವಿವಿಧ ಶಾಲೆಗಳ 428 ವಿದ್ಯಾರ್ಥಿಗಳು ಭಾಗವಹಿಸಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದರು.

ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಸೇವಾ ಮನೋಭಾವ, ನಾಯಕತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವುದು ರೆಡ್ ಕ್ರಾಸ್ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ. 1863ರಲ್ಲಿ ಜೀನ್ ಹೆನ್ರಿ ಡ್ಯುನಾಂಟ್ ಅವರು ಸ್ವಿಟ್ಜರ್ಲೆಂಡ್ನಲ್ಲಿ ಸ್ಥಾಪಿಸಿದ ಈ ಸಂಸ್ಥೆ ವಿಶ್ವದಾದ್ಯಂತ ಮಾನವೀಯ ಸೇವೆ ಸಲ್ಲಿಸುತ್ತಿದ್ದು, ಅದರ ಸೇವೆಯನ್ನು ಗುರುತಿಸಿ ಎರಡು ಬಾರಿ ನೊಬೆಲ್ ಶಾಂತಿ ಪ್ರಶಸ್ತಿ ಲಭಿಸಿದೆ ಎಂದು ವಿವರಿಸಿದರು.

ರೋಟರಿ ಕ್ಲಬ್ ಚನ್ನರಾಯಪಟ್ಟಣ ಅಧ್ಯಕ್ಷ ಶಿವನಂಜೇಗೌಡ ಹೆಚ್.ಎನ್. ಮಾತನಾಡಿ, ರೆಡ್ ಕ್ರಾಸ್ ಸಂಸ್ಥೆ ವಿದ್ಯಾರ್ಥಿಗಳನ್ನು ಉತ್ತಮ ಸ್ವಯಂಸೇವಕರನ್ನಾಗಿ ರೂಪಿಸುತ್ತಿದ್ದು, ಆರೋಗ್ಯ ಹಾಗೂ ಸಾಮಾಜಿಕ ಸೇವೆಯಲ್ಲಿ ಅದರ ಕೊಡುಗೆ ಶ್ಲಾಘನೀಯವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಚನಾ ಪಬ್ಲಿಕ್ ಸ್ಕೂಲ್ ಸಂಸ್ಥಾಪಕ ಪ್ರಕಾಶ್ ಹೆಚ್.ಟಿ., ವಿದ್ಯಾರ್ಥಿಗಳಲ್ಲಿ ನಾಯಕತ್ವ ಮತ್ತು ಸೇವಾ ಮನೋಭಾವ ಬೆಳೆಸುವ ಇಂತಹ ಕಾರ್ಯಕ್ರಮಗಳು ಅವರ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿದರು.

ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಜಬಿವುಲ್ಲಾ ಬೇಗ್ ಸಿ.ಎನ್. ಮಾತನಾಡಿ, 124 ವಿದ್ಯಾರ್ಥಿಗಳಿಗೆ ಕಿರಿಯ ರೆಡ್ ಕ್ರಾಸ್ ಪರೀಕ್ಷೆಯ ಪ್ರಮಾಣಪತ್ರ, ಪ್ರಥಮ ಚಿಕಿತ್ಸೆ ಪೆಟ್ಟಿಗೆ ಹಾಗೂ 500ಕ್ಕೂ ಹೆಚ್ಚು ಮಾಸ್ಕ್ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಖಜಾಂಚಿ ಕಿಶೋರ್ ಕುಮಾರ್ ಸಿ.ಎಸ್., ನಿರ್ದೇಶಕ ಹರೀಶ್ ಬಿ.ಪಿ., ಸದಸ್ಯ ನಾಗರಾಜ್, ರಚನಾ ಪಬ್ಲಿಕ್ ಸ್ಕೂಲ್ ಅಧ್ಯಕ್ಷೆ ಸುನಿತಾ, ವ್ಯವಸ್ಥಾಪಕ ಮಂಜುನಾಥ್ ಎಂ.ಎಂ., ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
- ಮಂಜುನಾಥ್ ಐ.ಕೆ.
