ಬೆಂಗಳೂರು, ಜೂನ್ 25: ರಾಜ್ಯದಲ್ಲಿ ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಪ್ರಕೃತಿ ವಿಕೋಪಗಳ ನಿರ್ವಹಣೆ ಹಾಗೂ ಪರಿಹಾರ ಕಾರ್ಯಗಳ ಪರಿಣಾಮಕಾರಿ ಮೇಲ್ವಿಚಾರಣೆಗಾಗಿ ರಾಜ್ಯ ಸರ್ಕಾರ ಉಪ ಮುಖ್ಯಮಂತ್ರಿ ಹಾಗೂ ವಿವಿಧ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿಗಳ ಅನುಮೋದನೆಯೊಂದಿಗೆ ಹೊರಡಿಸಿರುವ ಆದೇಶದ ಪ್ರಕಾರ, ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸಚಿವರುಗಳಿಗೆ ವಿವಿಧ ಜಿಲ್ಲೆಗಳ ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಜವಾಬ್ದಾರಿ ವಹಿಸಲಾಗಿದೆ.
ಆದೇಶದಂತೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ. ಕೆ.ಹೆಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳು, ರಾಮಲಿಂಗಾ ರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಮತ್ತು ಮಂಡ್ಯ ಜಿಲ್ಲೆಗಳು ಹಂಚಿಕೆ ಮಾಡಲಾಗಿದೆ.
ಎಂ.ಬಿ. ಪಾಟೀಲ್ ಅವರಿಗೆ ವಿಜಯಪುರ ಹಾಗೂ ಬಾಗಲಕೋಟೆ, ಕೆ.ಜಿ. ಜಾರ್ಜ್ ಅವರಿಗೆ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.
ಕೃಷ್ಣ ಬೈರೇಗೌಡ ಅವರಿಗೆ ಬೆಂಗಳೂರು ನಗರ ಹಾಗೂ ಹಾಸನ ಜಿಲ್ಲೆಗಳ ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ವಹಿಸಲಾಗಿದೆ. ಈಶ್ವರ್ ಖಂಡ್ರೆ ಅವರಿಗೆ ಬೀದರ್ ಮತ್ತು ಗದಗ, ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.
ಅದೇ ರೀತಿ ಪ್ರಿಯಾಂಕ್ ಖರ್ಗೆ ಅವರಿಗೆ ಕಲಬುರ್ಗಿ ಮತ್ತು ಯಾದಗಿರಿ, ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರಿಗೆ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಮೇಲುಸ್ತುವಾರಿ ವಹಿಸಲಾಗಿದೆ.
ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಉಡುಪಿ, ಕೋಡಗು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದ್ದು, ಭೈರತಿ ಸುರೇಶ್ ಅವರಿಗೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ಹಾಗೂ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ.
ಮುಂಗಾರು ಅವಧಿಯಲ್ಲಿ ಸಂಭವಿಸಬಹುದಾದ ಪ್ರವಾಹ, ಭೂಕುಸಿತ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳ ಸಂದರ್ಭಗಳಲ್ಲಿ ತ್ವರಿತ ಪರಿಹಾರ ಕಾರ್ಯ, ಸಮನ್ವಯ ಹಾಗೂ ಮೇಲ್ವಿಚಾರಣೆ ನಡೆಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ (ಲೆಕ್ಕಪತ್ರ) ಉಪ ಕಾರ್ಯದರ್ಶಿ ಎಸ್. ಶ್ರೀನಿವಾಸ್ ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ.


