ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ ಚುರುಕುಗೊಂಡಿದೆ. ಈ ಸಂಬಂಧ ಆಯುಧಪೂಜೆ ಮುನ್ನಾದಿನ ರಾತ್ರಿ ಸಚಿವರೊಂದಿಗೆ ಸಭೆ ನಡೆಸಿದ ಡಿ.ಕೆ. ಶಿವಕುಮಾರ್, ಆಡಳಿತ ಪಕ್ಷವಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಈಗಿನಿಂದಲೇ ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದ್ದಾರೆ.
ಡಿಸೆಂಬರ್ 31ರೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಚುನಾವಣಾ ಆಯೋಗವು ಅಕ್ಟೋಬರ್ 27ರಂದು ಹೊಸ ಮತದಾರರ ಪಟ್ಟಿಯನ್ನು ನೀಡಲಿದ್ದು, ಯಾವುದೇ ಸಮಯದಲ್ಲಿ ಚುನಾವಣೆ ಘೋಷಿಸುವ ಸಾಧ್ಯತೆಯಿದೆ. ಹೀಗಾಗಿ ಸಚಿವರು ಮತ್ತು ಶಾಸಕರು ಚುನಾವಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಇದೇ ವೇಳೆ, ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಮತ್ತು ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಲು ಅನುದಾನ ಬಿಡುಗಡೆ ಮಾಡುವ ಉದ್ದೇಶದಿಂದ ಪ್ರಸ್ತಾವನೆ ಸಲ್ಲಿಸುವಂತೆ ಶಾಸಕರಿಗೆ ಸೂಚಿಸಲಾಗಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
1,129 ಜಿಲ್ಲಾ ಪಂಚಾಯಿತಿ, 3,656 ತಾಲೂಕು ಪಂಚಾಯಿತಿ ಕ್ಷೇತ್ರಗಳು
ರಾಜ್ಯದಲ್ಲಿ ಒಟ್ಟು 31 ಜಿಲ್ಲಾ ಪಂಚಾಯಿತಿಗಳ 1,129 ಕ್ಷೇತ್ರಗಳು ಹಾಗೂ 239 ತಾಲೂಕು ಪಂಚಾಯಿತಿಗಳ 3,656 ಕ್ಷೇತ್ರಗಳಿವೆ. ಕರಡು ಮೀಸಲಾತಿ ಪಟ್ಟಿಯ ಪ್ರಕಾರ, ಜಿಲ್ಲಾ ಪಂಚಾಯಿತಿಯಲ್ಲಿ 571 ಹಾಗೂ ತಾಲೂಕು ಪಂಚಾಯಿತಿಯಲ್ಲಿ 1,905 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ.
ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪೈಕಿ ಬೆಳಗಾವಿಯಲ್ಲಿ ಅತಿ ಹೆಚ್ಚು 90 ಕ್ಷೇತ್ರಗಳಿದ್ದು, ಗದಗ ಜಿಲ್ಲೆಯಲ್ಲಿ ಕನಿಷ್ಠ 25 ಕ್ಷೇತ್ರಗಳಿವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸರ್ಕಾರ ಸಿದ್ಧತೆ ಆರಂಭಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಗರಿಗೆದರುವ ನಿರೀಕ್ಷೆಯಿದೆ.
