ಕೆ.ಆರ್.ಪೇಟೆ,ಜು.16: ಚುನಾವಣಾ ಆಯೋಗದಿಂದ ನಡೆಯುತ್ತಿರುವ(ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ) ಎಸ್.ಐ.ಆರ್. ಕಾರ್ಯಕ್ರಮದಲ್ಲಿ ಎಲ್ಲಾ ಮತದಾರರು ಸಕ್ರಿಯವಾಗಿ ಭಾಗವಹಿಸಬೇಕು. ತಮ್ಮ ಹೆಸರು ಮತಪಟ್ಟಿಯಲ್ಲಿ ಉಳಿಸಿಕೊಳ್ಳಲು ಕೂಡಲೇ ಚುನಾವಣಾ ಬಿ.ಎಲ್.ಓ ಅಧಿಕಾರಿಗಳಿಂದ ಎನ್ಯುಮರೇಷನ್ ಫಾರಂ ಪಡೆದು ಭರ್ತಿ ಮಾಡಿ ವಾಪಸ್ ನೀಡಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಬೇಕು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿದ್ದರೆ ರಾಜ್ಯ ಸರ್ಕಾರವು ಜಾರಿಗೊಳಿಸುತ್ತಿರುವ ಐದು ಗ್ಯಾರಂಟಿ ಯೋಜನೆಗಳು ತಂತಾನೆ ಬಂದ್ ಆಗಲಿವೆ ಹಾಗಾಗಿ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಇದೇ ಜುಲೈ 29ವರೆಗೆ ಇದ್ದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಅಡಿಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿ.ಎಲ್.ಒ) ನಡೆಸುವ ಮನೆ ಮನೆ ಬೇಟಿ ಮತ್ತು ಎನ್ಯುಮರೇಷನ್(ಗಣತಿ ನಮೂನೆ) ಫಾರಂ ವಿತರಣೆಯ ದಿನಾಂಕವನ್ನು ಆಗಸ್ಟ್ 8ರ ವರೆಗೆ ವಿಸ್ತರಣೆ ಮಾಡಿದ್ದಾರೆ. ಆಗಸ್ಟ್ 17ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ.

ಸೆಪ್ಟೆಂಬರ್ 16ವರೆಗೆ ಆಕ್ಷೆಪಣೆ ಮತ್ತು ಹೊಸ ಸೇರ್ಪಡೆಗೆ ಅವಕಾಶ ಇರುತ್ತದೆ. ಅಕ್ಟೋಬರ್ 19ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗುತ್ತದೆ. ಅಂತಿಮ ಮತದಾರರ ಪಟ್ಟಿಯಲ್ಲಿ ಐದೂ ಯೋಜನೆಗಳ ಫಲಾನುಭವಿಗಳ ಹೆಸರು ಇಲ್ಲದಿದ್ದರೆ ಅಂತಹವರಿಗೆ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುವ ಅಥವಾ ಬಂದ್ ಮಾಡುವ ಬಗ್ಗೆ ಮುಖ್ಯಮಂತ್ರಿಗಳು ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಹಾಗಾಗಿ ಇದಕ್ಕೆ ಅವಕಾಶ ನೀಡದಂತೆ ಮತದಾರರು ಎಸ್.ಐ.ಆರ್. ಕಾರ್ಯಾಚರಣೆಯನ್ನು ಉದಾಸೀನತೆ ಮಾಡದೇ ಗಂಭೀರವಾಗಿ ಪರಿಗಣಿಸಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಲು ಮುಂದಾಗಬೇಕು. ಈ ಮೂಲಕ ಗ್ಯಾರಂಟಿ ಯೋಜನೆಗಳು ಕೈತಪ್ಪದಂತೆ ನೋಡಿಕೊಳ್ಳಬೇಕು ಎಂದು ಎ.ಬಿ.ಕುಮಾರ್ ಸಲಹೆ ನೀಡಿದರು.
ನಮ್ಮ ಕಾಂಗ್ರೆಸ್ ಪಕ್ಷದ ವರಿಷ್ಠರು ಚುನಾವಣಾ ಪೂರ್ವದಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ, ಯುವನಿಧಿ, ಅನ್ನಭಾಗ್ಯ ಯೋಜನೆಗಳನ್ನು ಬಡವರ ಹಿತದೃಷ್ಠಿಯನ್ನಿಟ್ಟುಕೊಂಡು ಘೋಷಣೆ ಮಾಡಿದರು. ಇದರ ಪರಿಣಾಮ 135ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬರುತ್ತಿದ್ದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ನಮ್ಮದು ಬಡವರ ಪರ ಸರ್ಕಾರ ಎಂಬುದನ್ನು ಸಾಬೀತು ಪಡಿಸಿದ್ದಾರೆ. ಅದೇ ರೀತಿ ನಿಕಟಪೂರ್ವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು 3ವರ್ಷಗಳ ಕಾಲ ಉತ್ತಮ ಆಡಳಿತ ನೀಡಿದ್ದಾರೆ.
ಅದೇ ಹಾದಿಯಲ್ಲಿ ಮುಂದುವರೆದು ನೂತನ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರೂ ಸಹ ಅತ್ಯುತ್ತಮ ಆಡಳಿತ ನೀಡುತ್ತಿದ್ದಾರೆ. ಇದರಿಂದಾಗಿ 2028ಕ್ಕೂ ನಮ್ಮ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುವುದು ಖಚಿತವಾಗಿದೆ ಹಾಗಾಗಿ ನಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಮ್ಮ ಪಕ್ಷದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ. ಯುವ ನಿಧಿ ಯೋಜನೆಗಳ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಬೇಕು ಎಂದು ಎ.ಬಿ.ಕುಮಾರ್ ಮನವಿ ಮಾಡಿದರು.
ಸಭೆಯಲ್ಲಿ ಚೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪುಟ್ಟಸ್ವಾಮೀಗೌಡ, ತಾಲ್ಲೂಕು ಆಹಾರ ಇಲಾಖೆಯ ಶಿರಸ್ತೇದಾರ್ ನಟರಾಜ್, ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಸಿಡಿಪಿಓ ರೂಪಾ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿ ಚಂದನ್.ಬಿ.ಕೆ, ಬಸ್ ಡಿಪೋ ಟ್ರಾಪಿಕ್ ಇನ್ಸ್ಪೆಕ್ಟರ್ ಗವಿಸಿದ್ದಪ್ಪ ಅವರು ತಮ್ಮ ತಮ್ಮ ಇಲಾಖೆಯ ಪ್ರಗತಿಯ ವರದಿಯನ್ನು ಮಂಡಿಸಿದರು.
ಸಭೆಯಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೆ.ಸುಷ್ಮ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಮೆಣಸ ಸಿ.ಆರ್.ಪಿ.ಕುಮಾರ್, ಬೂಕನಕೆರೆ ರೂಪಾಚಂದ್ರಶೇಖರ್, ಕನಕದಾಸನಗರ ಶಿವಮ್ಮ, ಬೊಮ್ಮೇನಹಳ್ಳಿ ಲತಾ, ಕೆ.ಎಸ್.ಆರ್.ಟಿ.ಸಿ ಶಿವಣ್ಣ, ಸಿಂಗನಹಳ್ಳಿ ಗೋಪಾಲ್, ಬಂಡಿಹೊಳೆ ಯೋಗೇಶ್(ಉಮೇಶ್), ಹಾಫೀಜ್ಉಲ್ಲಾ, ಗೋವಿಂದನಹಳ್ಳಿ ಶ್ಯಾಮಣ್ಣ, ಬೂಕನಕೆರೆ ಬಿ.ಸಿ.ಮಾಧು, ದೊಡ್ಡತಾರಹಳ್ಳಿ ಸೋಮಶೇಖರ್, ಶಿವಲಿಂಗಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ವಿಷಯ ನಿರ್ವಾಹಕಿ ನಂದಿನಿ ಇತರರು ಉಪಸ್ಥಿತರಿದ್ದರು.
– ಶ್ರೀನಿವಾಸ್ ಆರ್.
