ಸಕಲೇಶಪುರ: ಅತಿ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಗುಲಗಳಲೆ ಸಮೀಪ ರಾಷ್ಟ್ರೀಯ ಹೆದ್ದಾರಿ 75ನಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ಶನಿವಾರ ಬೆಳಗ್ಗೆ ಸುಮಾರು 5 ಗಂಟೆ ವೇಳೆಗೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅವರು ಬೆಂಗಳೂರಿನಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಅತಿ ವೇಗವೇ ಅಪಘಾತಕ್ಕೆ ಪ್ರಮುಖ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಯಿಂದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಮಿಳುನಾಡು ಮೂಲದವರು ಎಂದು ಗುರುತಿಸಲಾಗಿದೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಎನ್ಎಚ್ಎಐ ಆಂಬ್ಯುಲೆನ್ಸ್ ಮೂಲಕ ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಮಾಹಿತಿ ತಿಳಿದ ಕೂಡಲೇ ಸಕಲೇಶಪುರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿದ್ದು, ನಂತರ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತರ ನಿಖರ ಹೆಸರು ಹಾಗೂ ವಿಳಾಸ ಸೇರಿದಂತೆ ಹೆಚ್ಚಿನ ವಿವರಗಳಿಗಾಗಿ ತನಿಖೆ ಮುಂದುವರಿಸಿದ್ದಾರೆ.