ಅರೇಹಳ್ಳಿ: ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಹೆಗ್ಗಡಿಹಳ್ಳಿ ಗ್ರಾಮದ ಸಮೀಪ ಭೀಮ ಹೆಸರಿನ ಕಾಡಾನೆ ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಕಳೆದ ಹಲವು ದಿನಗಳಿಂದ ಸಕಲೇಶಪುರ ತಾಲೂಕು ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದ ಭೀಮ ಕಾಡಾನೆ, ಮಂಗಳವಾರ ಸಂಜೆ ಲಿಂಗಾಪುರದ ಸಮೀಪ ಕಾಣಿಸಿಕೊಂಡಿತ್ತು. ಬಳಿಕ ರಾತ್ರಿ ಅರೇಹಳ್ಳಿ–ದೋಲನಮನೆ ರಸ್ತೆಯಲ್ಲಿ ಸಂಚರಿಸಿದ್ದು, ರಸ್ತೆಯಲ್ಲೇ ಕಾಡಾನೆ ಓಡಾಡುವುದನ್ನು ಕಂಡ ವಾಹನ ಸವಾರರು ಹಾಗೂ ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ.
ನಂತರ ಕಾಡಾನೆ ವೀರಭದ್ರೇಶ್ವರ ಕಾಫಿ ಎಸ್ಟೇಟ್ಗೆ ನುಗ್ಗಿ ತೋಟದೊಳಗೆ ಸಂಚರಿಸಿದೆ. ಜನವಸತಿ ಪ್ರದೇಶಗಳ ಸಮೀಪವೇ ಕಾಡಾನೆ ಕಾಣಿಸಿಕೊಳ್ಳುತ್ತಿರುವುದು ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ.
ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ತೆರಳುವ ರೈತರು ಹಾಗೂ ಕೂಲಿ ಕಾರ್ಮಿಕರು ಜೀವಭಯದಲ್ಲೇ ಸಂಚರಿಸುವಂತಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳ ಚಲನವಲನದ ಮೇಲೆ ನಿಗಾ ವಹಿಸುವುದರ ಜತೆಗೆ, ಭೀಮ ಸೇರಿದಂತೆ ಈ ಭಾಗದಲ್ಲಿ ಸಂಚರಿಸುತ್ತಿರುವ ಕಾಡಾನೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಕಾಡಾನೆಗಳ ನಿರಂತರ ಸಂಚಾರಕ್ಕೆ ಶಾಶ್ವತ ಪರಿಹಾರ ಕಲ್ಪಿಸಿ, ಜನರ ಜೀವ ಹಾಗೂ ಆಸ್ತಿಪಾಸ್ತಿಗೆ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
